ಬೆಂಗಳೂರು: ಕೋಲಾರದ ವಿದ್ಯಾರ್ಥಿಗಳು ಮುರುಡೇಶ್ವರದಲ್ಲಿ ಶೈಕ್ಷಣಿಕ ಪ್ರವಾಸದ ವೇಳೆ 4 ವಿದ್ಯಾರ್ಥಿಗಳು ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಒಬ್ಬ ವಿದ್ಯಾರ್ಥಿನಿ ಮೃತ ದೇಹ ಪತ್ತೆಯಾಗಿದ್ದು ಉಳಿದ ಮೂವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಮೃತ ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರವನ್ನ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸಿಎಂ, ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆಂದು ಹೋದ ಸಂದರ್ಭದಲ್ಲಿ ಮುರುಡೇಶ್ವರ ಬಳಿಯ ಸಮುದ್ರದಲ್ಲಿ ನೀರುಪಾಲಾದ ಸುದ್ದಿ ತಿಳಿದು ಆಘಾತವಾಯಿತು. ಮೃತ ಮಕ್ಕಳ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಮಕ್ಕಳ ದುಃಖತಪ್ತ ಪೋಷಕರಿಗೆ ನನ್ನ ಸಂತಾಪಗಳು. ಈ ದುರ್ಘಟನೆಯಲ್ಲಿ ಮಡಿದ ನಾಲ್ವರು ವಿದ್ಯಾರ್ಥಿಗಳ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಮೃತ ದೇಹಗಳನ್ನು ಹುಟ್ಟೂರಿಗೆ ತಲುಪಿಸುವ ವ್ಯವಸ್ಥೆ ಮಾಡುವಂತೆ ಸಿಎಂ ಸೂಚಿಸಿದ್ದಾರೆ.
ಪ್ರವಾಸದ ಸಂದರ್ಭದಲ್ಲಿ ಶಿಕ್ಷಕರು ಮಕ್ಕಳ ಬಗ್ಗೆ ಹೆಚ್ಚು ಜಾಗೃತೆ ವಹಿಸಬೇಕು. ಅಪಾಯಕಾರಿ ಸ್ಥಳಗಳಿಗೆ ಭೇಟಿನೀಡುವಾಗ ಮಕ್ಕಳ ಮೇಲೆ ನಿಗಾ ಇಡಬೇಕು. ಮಕ್ಕಳನ್ನು ಕಳೆದುಕೊಂಡ ಹೆತ್ತವರ ನೋವು ಸಂಕಟವನ್ನು ನಾನು ಅರ್ಥೈಸಿಕೊಳ್ಳಬಲ್ಲೆ, ಇಂತಹ ಅವಘಡಗಳು ಮತ್ತೆಂದೂ ಸಂಭವಿಸದಿರಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.
PublicNext
11/12/2024 03:08 pm