ಮಂಗಳೂರು: ದಾಖಲೆ ನೀಡಲು ಹಣದ ಬೇಡಿಕೆಯಿಟ್ಟಿದ್ದ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಪಿಡಿಒ ಒಬ್ಬರಿಗೆ ಮೂರು ವರ್ಷಗಳ ಸಾದಾ ಸಜೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ.
ದ.ಕ.ಜಿಲ್ಲೆಯ ಕಡಬ ತಾಲ್ಲೂಕಿನ ಐತ್ತೂರು ಗ್ರಾಪಂ ಅಭಿವೃದ್ಧಿ ಅಧಿಕಾರಿ ಪ್ರೇಮ್ ಸಿಂಗ್ ನಾಯ್ಕ 9/11ರ ದಾಖಲೆ ನೀಡಲು 9,000 ರೂ. ಲಂಚದ ಬೇಡಿಕೆ ಇಟ್ಟಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ 2019ರ ಜೂನ್ 3ರಂದು ಭ್ರಷ್ಟಾಚಾರ ನಿಗ್ರಹದಳದ ಪೊಲೀಸರು ದಾಳಿ ನಡೆಸಿದ್ದರು. ಪಿಡಿಒ ಲಂಚದ ಹಣ ಸ್ವೀಕರಿಸುತ್ತಿದ್ದಾಗಲೇ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರು.
ಈ ಬಗ್ಗೆ ತನಿಖಾಧಿಕಾರಿಯಾಗಿದ್ದ ಪೊಲೀಸ್ ಇನ್‌ಸ್ಪೆಕ್ಟರ್ ಶ್ಯಾಮಸುಂದರ ಎಚ್.ಎಂ. ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮೂರು ವರ್ಷಗಳ ಸಾದಾ ಶಿಕ್ಷೆ ಹಾಗೂ 50ಸಾವಿರ ರೂ. ದಂಡ ವಿಧಿಸಿ ಆದೇಶ ಪ್ರಕಟಿಸಿದೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ವಕೀಲ ರವೀಂದ್ರ ಮುನ್ನಿಪಾಡಿ ವಾದಿಸಿದ್ದರು.
PublicNext
15/12/2024 05:32 pm