ಚಿತ್ರದುರ್ಗ : ಜಿಲ್ಲೆಯಲ್ಲಿ ಶಾಲೆ ಬಿಟ್ಟ ಮಕ್ಕಳನ್ನು ಮುಖ್ಯವಾಹಿನಿಗೆ ತರುವ ಕೆಲಸ ವಾಗಬೇಕು. ಮಕ್ಕಳು ಶಾಲೆಗೆ ಗೈರು ಹಾಜರಾಗದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ 4ನೇ ತ್ರೈಮಾಸಿಕ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಕ್ಕಳು ಶಾಲೆಯಿಂದ ಹೊರಗುಳಿದರೆ ಫಲಿತಾಂಶದ ಮೇಲೆ ಪರಿಣಾಮ ಬೀರಲಿದ್ದು, ಫಲಿತಾಂಶ ಕಡಿಮೆಯಾಗಲಿದೆ. ಮಕ್ಕಳು ಶಾಲೆಯಿಂದ ಹೊರಗುಳಿಯಲು ನಿಖರವಾದ ಕಾರಣ ಪತ್ತೆ ಹಚ್ಚಬೇಕು. ಶಾಲೆಯಿಂದ ಹೊರಗುಳಿದ ಮಕ್ಕಳ ಮುಖ್ಯವಾಹಿನಿಗೆ ತರಲು ವಿಶೇಷ ಅಭಿಯಾನ ಆಯೋಜಿಸುವಂತೆ ಜಿಲ್ಲಾಧಿಕಾರಿಗಳು ಸಲಹೆ ನೀಡಿದರು.
ಕಳೆದ ಸಾಲಿಗಿಂತ ಈ ಬಾರಿ ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶ ಉತ್ತಮ ಪಡಿಸುವ ನಿಟ್ಟಿನಲ್ಲಿ ಶಿಕ್ಷಕರಿಗೆ ಪುನಶ್ಚೇತನ ಕಾರ್ಯಾಗಾರಗಳನ್ನು ಆಯೋಜಿಸುವ ಮೂಲಕ ಫಲಿತಾಂಶದಲ್ಲಿ ಉತ್ತಮ ಸಾಧನೆಗೆ ಕ್ರಮ ವಹಿಸಬೇಕು ಎಂದರು.
ಇದಕ್ಕೆ ಪ್ರತಿಕ್ರಿಯಿಸಿದ ಜಿ.ಪಂ ಸಿಇಒ ಎಸ್.ಜೆ.ಸೋಮಶೇಖರ್, ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.50 ರಷ್ಟು ಕಡಿಮೆ ಫಲಿತಾಂಶ ಇರುವ ಮುಖ್ಯ ಶಿಕ್ಷಕರ ಸಭೆ ಕರೆದು ಚರ್ಚಿಸಲಾಗಿದ್ದು, ಫಲಿತಾಂಶ ಹೆಚ್ಚಳಕ್ಕೆ ಕ್ರಮ ವಹಿಸಬೇಕು ಎಂದು ಸೂಚನೆ ನೀಡಲಾಗಿದೆ ಎಂದು ಹೇಳಿದದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ, ಚಿತ್ರದುರ್ಗ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ದಿನಕರ್, ಜಿಲ್ಲಾ ಕೈಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಬಿ.ಆನಂದ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರು ಇದ್ದರು.
PublicNext
20/12/2024 12:46 pm