ಮಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ತಿರುಚಲಾಗಿದೆ. ಸಿ.ಟಿ.ರವಿಯವರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿ ಹಲ್ಲೆಗೈಯಲಾಗಿದೆ ಎಂದು ಆರೋಪಿಸಿ ಮಂಗಳೂರಿನ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲೆತ್ನಿಸಿದ ಶಾಸಕ ವೇದವ್ಯಾಸ ಕಾಮತ್ ಸೇರಿದಂತೆ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಚೇರಿಗೆ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಕಾಂಗ್ರೆಸ್ ಕಚೇರಿ ಮುಂಭಾಗ ಬ್ಯಾರಿಕೇಡ್ ಅಳವಡಿಸಿ ಮುತ್ತಿಗೆ ಹಾಕದಂತೆ ಪೊಲೀಸರು ಭದ್ರತೆ ಕಲ್ಪಿಸಿದ್ದರು. ಅಲ್ಲದೇ ಸ್ಥಳದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸಿದ್ದರು.
ಕಾಂಗ್ರೆಸ್ ಕಚೇರಿಗಿಂತ ಅಣತಿ ದೂರದಲ್ಲಿರುವ ಮಲ್ಲಿಕಟ್ಟೆ ಸರ್ಕಲ್ ಬಳಿ ಆಗಮಿಸಿದ ನೂರಾರು ಮಂದಿಯಿದ್ದ ಪ್ರತಿಭಟನಾಕಾರರ ತಂಡ ಕಾಂಗ್ರೆಸ್ ಸರಕಾರದ ಧೋರಣೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಸರಕಾರದ ವಿರುದ್ಧ ಘೋಷಣೆ ಕೂಗಿದರು. ಬಳಿಕ ಪ್ರತಿಭಟನಾಕಾರರು ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದಾಗ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ತಳ್ಳಾಟ - ನೂಕಾಟ ನಡೆಯಿತು. ಮಲ್ಲಿಕಟ್ಟೆ ಸರ್ಕಲ್ ಬಳಿಯೂ ಭಾರೀ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದ್ದು, ಶಾಸಕ ವೇದವ್ಯಾಸ ಕಾಮತ್ ಸೇರಿದಂತೆ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು. ಈ ವೇಳೆ ಸ್ವಲ್ಪಕಾಲ ಸಂಚಾರ ವ್ಯವಸ್ಥೆಗೆ ತೊಡಕು ಉಂಟಾಗಿತ್ತು.
PublicNext
20/12/2024 07:44 pm