ಬೆಳಗಾವಿ: ಕೆಎಲ್‌ಇ ಕಾನ್ಸರ್ ಆಸ್ಪತ್ರೆಯನ್ನು ಡಿ.30 ರಂದು ಮಧ್ಯಾಹ್ನ 4 ಗಂಟೆಗೆ ಗೌರವಾನ್ವಿತ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರು ಜನಸೇವೆಗೆ ಅರ್ಪಿಸಲಿದ್ದಾರೆ ಎಂದು ಕೆ ಎಲ್ ಇ ಸಂಸ್ಥೆಯ ಕಾರ್ಯಧ್ಯಕ್ಷ ಪ್ರಭಾಕರ ಕೋರೆ ಅವರು ತಿಳಿಸಿದರು.
ಇಂದು ಮಾಧ್ಯಮಗೊಷ್ಠಿ ನಡೆಸಿ ಮಾತನಾಡಿದ ಅವರು, ಆಸ್ಪತ್ರೆ ಉದ್ಘಾಟನಾ ಕಾರ್ಯಕ್ರಮಕ್ಕೆ ಗೌರವ ಅತಿಥಿಗಳಾಗಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಕೇಂದ್ರದ ಗ್ರಾಹಕ ಸೇವೆ, ಆಹಾರ ಮತ್ತು ನಾಗರೀಕ ಪೂರೈಕೆ, ನೂತನ ಹಾಗೂ ನವೀಕರಿಸಬಹುದಾದ ಇಂಧನ ಸಚಿವರಾದ ಪ್ರಹ್ಲಾದ್ ಜೋಷಿ, ಸಚಿವರಾದ ಶರಣಪ್ರಕಾಶ ಪಾಟೀಲ, ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ಸಂಸದ ಜಗದೀಶ್ ಶೆಟ್ಟರ್, ಶಾಸಕರಾದ ರಾಜು ಸೇಟ್, ಅಭಯ ಪಾಟೀಲ ಮತ್ತು ಕಾಹೇರನ ಉಪಕುಲಪತಿ ಡಾ. ನಿತಿನ ಗಂಗಾಣೆ, ದಾನಿಗಳಾದ ಡಾ. ಸಂಪತ್ ಕುಮಾರ್ ಶಿವಾನಗಿ ಹಾಗೂ ಡಾ. ಉದಯಾ ಶಿವಾನಗಿ ಅವರು ಉಪಸ್ಥಿತರಿರಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಮಹಾಂತೇಶ ಕೌಜಲಗಿ ಅವರು ವಹಿಸಲಿದ್ದಾರೆ.
ಕ್ಯಾನ್ಸರ ಸಂಬಂಧಿತ ಖಾಯಿಲೆಗಳಿಗೆ ಒಂದೇ ಸೂರಿನಡಿ ಚಿಕಿತ್ಸೆ ಹಾಗೂ ಎಲ್ಲ ಪ್ರಕ್ರಿಯೆಗಳನ್ನು ಮಾಡಬೇಕೆನ್ನುವ ಕನಸು ಈಗ ನನಸಾಗಿದೆ. ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಿಂಭಾಗದಲ್ಲಿ ಸುಸಜ್ಜಿತವಾದ ಎಲ್ಲ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಕ್ಯಾನ್ಸರ್ ಆಸ್ಪತ್ರೆಯು ಅತ್ಯಾಧುನಿಕ ವೈದ್ಯಕೀಯ ಯಂತ್ರೋಪಕರಣಗಳನ್ನು ಹೊಂದಿದೆ.
ಕ್ಯಾನ್ಸರ್ ಚಿಕಿತ್ಸೆಗಾಗಿ ಬೇರೆ ಬೇರೆ ನಗರಗಳಿಗೆ ಅಲೆಯುವುದನ್ನು ತಪ್ಪಿಸಿ ಬಹು ವಿಧದ ಕ್ಯಾನ್ಸರ್ ಗೆ ಚಿಕಿತ್ಸೆ ನೀಡುವ ಆಸ್ಪತ್ರೆಯಾಗಿರುವ ಇಲ್ಲಿ ಕ್ಯಾನ್ಸರ್ ಸಂಬಂಧಿತ ಎಲ್ಲ ಖಾಯಿಲೆಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಶಸ್ತ್ರಚಿಕಿತ್ಸೆಯಿಂದ ಹಿಡಿದು, ಕೀಮೋಥೆರಪಿ, ರೆಡಿಯೋಥೆರಪಿ ಸೇರಿದಂತೆ ಎಲ್ಲ ರೀತಿಯ ಚಿಕಿತ್ಸೆ ಲಭ್ಯವಿದೆ. ಸಂಸ್ಥೆಯ ಕಾರ‍್ಯಾಧ್ಯಕ್ಷರಾದ ಡಾ. ಪ್ರಭಾಕರ ಕೋರೆ ಹಾಗೂ ಆಡಳಿತ ಮಂಡಳಿಯ ಸದಸ್ಯರ ಇಚ್ಛೆಯಂತೆ ಆಸ್ಪತ್ರೆಯು ಜನಸೇವೆಗೆ ತೆರೆದುಕೊಂಡಿದೆ.
ರೊಬೊಟಿಕ್ ಶಸ್ತ್ರಚಿಕಿತ್ಸೆ, ತೀವ್ರ ನಿಗಾ ಘಟಕ ರೆಡಿಯೇಶನ್ ಥೆರಪಿ ಮೂಲಕ ಚಿಕಿತ್ಸೆ ದೊರೆಯಲಿದೆ. ರೆಡಿಯೋ (ವಿಕಿರಣ) ಆಂಕೊಲಾಜಿ, ಮೆಡಿಕಲ್ ಆಂಕೊಲಾಜಿ, ಇಂಟರ್ವೆನ್ಷನಲ್ ರೇಡಿಯಾಲಜಿ, ನ್ಯೂಕ್ಲಿಯರ್ ಮೆಡಿಸಿನ್ ಮತ್ತು ಫಿಜಿಯೋಥೆರಪಿ ವಿಭಾಗಗಳು ರೋಗಿಗಳ ಆರೈಕೆಯಲ್ಲಿ ನಿರಂತರವಾಗಿ ತೊಡಗಿಕೊಂಡಿವೆ ಎಂದರು.
PublicNext
24/12/2024 06:18 pm