ಮಡಿಕೇರಿ: ಕೊಡಗು ಜಿಲ್ಲೆ ಕಟ್ಟೆಮಾಡು ಶ್ರೀ ಮಹಾಮೃತ್ಯುಂಜಯ ದೇವಾಲಯದಲ್ಲಿ ಉಂಟಾಗಿರುವ ಎರಡು ಜನಾಂಗಗಳಲ್ಲಿನ ಭಿನ್ನಾಭಿಪ್ರಾಯ ಶಮನಕ್ಕೆ ಜಿಲ್ಲಾಡಳಿತ ಡಿ.30 ರಂದು ಉಭಯ ಕಡೆಯವರ ಶಾಂತಿ ಸಭೆ ಕರೆದಿದ್ದು, ಎಲ್ಲರೂ ಶಾಂತಿಯುತವಾಗಿ ಸಮಸ್ಯೆಯನ್ನು ಬಗೆಹರಿಸಲು ಪೊಲೀಸ್ ಇಲಾಖೆಯೊಂದಿಗೆ ಕೈಜೋಡಿಸಬೇಕೆಂದು ಕೊಡಗು ಜಿಲ್ಲಾ ವರಿಷ್ಠಾಧಿಕಾರಿ ಕೆ.ರಾಮರಾಜನ್ ಪೊಲೀಸ್ ಮನವಿ ಮಾಡಿದ್ದಾರೆ. ಈಗಾಗಲೇ ದೇವಾಲಯದ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದು, ಯಾರಾದರು ಶಾಂತಿಭಂಗ ಮಾಡಲು ಯತ್ನಿಸಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಪರಿಸ್ಥಿತಿಯನ್ನು ಶಾಂತಿಯುತವಾಗಿ ನಿಭಾಯಿಸಲು ಅವಕಾಶವಿದ್ದರೂ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಪರಸ್ಪರ ಜನಾಂಗಗಳ ವಿರುದ್ಧ ಅವಹೇಳನ ಮಾಡುತ್ತಿರುವುದು ಕಂಡು ಬಂದಿದೆ. ಸಮಾಜದಲ್ಲಿ ಅಶಾಂತಿ ಮೂಡಿಸುವವರ ಪರ ಯಾರೂ ನಿಲ್ಲಬಾರದು. ಸಮಸ್ಯೆಯನ್ನು ಬಗೆಹರಿಸಲು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಇದೆ. ಯಾರ ಮೇಲೂ ನಂಬಿಕೆ ಇಲ್ಲದಿದ್ದರೆ ಕಾನೂನಿನ ಮೊರೆ ಹೋಗಬಹುದು. ಪ್ರಕರಣದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅನವಶ್ಯಕ
ಹೇಳಿಕೆಗಳನ್ನು ನೀಡುವುದು ಸರಿಯಲ್ಲ. ಎಲ್ಲರೂ ಶಾಂತಿಯನ್ನು ಕಾಪಾಡಬೇಕು, ಶಾಂತಿಭಂಗ ಮಾಡಿದರೆ ಕಠಿಣ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ತಿಳಿಸಿದ್ದಾರೆ.
Kshetra Samachara
30/12/2024 11:49 am