ಬೆಂಗಳೂರು : ಕೆಎಎಸ್ ಪೂರ್ವಭಾವಿ ಮರು ಪರೀಕ್ಷೆಯಲ್ಲಿ ಕೆಪಿಎಸ್‌ಸಿ ಮತ್ತೆ ಎಡವಟ್ಟು ಮಾಡಿದ್ದು ಇದರಿಂದ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳ ಭವಿಷ್ಯ ಡೋಲಾಯಮಾನವಾಗಿದೆ ಇದಕ್ಕೆ ಕಾರಣ ಸಿಎಂ ಸಿದ್ದರಾಮಯ್ಯನವರ ರಾಜಕೀಯ ಹಸ್ತಕ್ಷೇಪ ವಿಪಕ್ಷ ನಾಯಕ ಆರ್.ಅಶೋಕ ಆರೋಪ ಮಾಡಿದ್ದಾರೆ.
ಈ ಕುರಿತು ಅವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಆರ್ ಆಶೋಕ್, ಕಾಂಗ್ರೆಸ್ ಸರ್ಕಾರ ಮರುಪರೀಕ್ಷೆಯಲ್ಲೂ ಮುಗ್ಗರಿಸಿದೆ. ಆಗಸ್ಟ್ ನಲ್ಲಿ ನಡೆದ 2023-24ನೇ ಸಾಲಿನ ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೇಷನರ್ ಪೂರ್ವಭಾವಿ ಪರೀಕ್ಷೆಯಲ್ಲಿ ಭಾರಿ ಎಡವಟ್ಟುಗಳು ಕಂಡುಬಂದಿತ್ತು. ಅಭ್ಯರ್ಥಿಗಳ ಆಕ್ರೋಶಕ್ಕೆ ಮಣಿದ ಸರ್ಕಾರ ಮರು ಪರೀಕ್ಷೆ ನಡೆಸಿತ್ತು. ಆದರೆ ಅದರಲ್ಲೂ ಎಡವಟ್ಟುಗಳ ಮೇಲೆ ಎಡವಟ್ಟು ಮಾಡಿದ್ದು, ಲಕ್ಷಾಂತರ ಉದ್ಯೋಗಾಕಾಂಕ್ಷಿಗಳ ಭವಿಷ್ಯ ಡೋಲಾಯಮಾನವಾಗಿದೆ.
ಭಾಷಾಂತರದಲ್ಲಿ ಲೋಪ, ಒಎಂಆರ್ ಶೀಟ್ ಮತ್ತು ನೋಂದಣಿ ಸಂಖ್ಯೆ ಅದಲು ಬದಲು, ಕೆಲವೆಡೆ 45 ನಿಮಿಷ ತಡವಾಗಿ ಪರೀಕ್ಷೆ ಆರಂಭ, ಹೀಗೆ ಸಾಲು ಸಾಲು ಎಡವಟ್ಟುಗಳಿಂದ ಕೂಡಿದ್ದ ಭಾನುವಾರದ ಮರು ಪರೀಕ್ಷೆ ಮತ್ತೊಮ್ಮೆ ಅಭ್ಯರ್ಥಿಗಳ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ದೂರಿದ್ದಾರೆ.
ಮರುಪರೀಕ್ಷೆಗೆ ನೋಂದಣಿ ಮಾಡಿಕೊಂಡ್ಡ 2.10 ಲಕ್ಷ ಅಭ್ಯರ್ಥಿಗಳ ಪೈಕಿ ಕೇವಲ 1 ಲಕ್ಷ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಆಗಸ್ಟ್‌ನಲ್ಲಿ ನಡೆದ ಪರೀಕ್ಷೆಯಲ್ಲಿ ಶೇ.62.52 ರಷ್ಟಿದ್ದ ಹಾಜರಾತಿ, ಮರುಪರೀಕ್ಷೆಯಲ್ಲಿ ಶೇ.47.7ಕ್ಕೆ ಕುಸಿದಿದೆ. ಅಂದರೆ ಅಭ್ಯರ್ಥಿಗಳು ಕಾಂಗ್ರೆಸ್ ಸರ್ಕಾರ ಹಾಗೂ ಕೆಪಿಎಸ್‌ಸಿ ಮೇಲೆ ನಂಬಿಕೆ ಕಳೆದುಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯನವರ ಸರ್ಕಾರದ ರಾಜಕೀಯ ಹಸ್ತಕ್ಷೇಪ, ಭ್ರಷ್ಟಾಚಾರ, ಸ್ವಜನಪಕ್ಷಪಾತವೇ ಕೆಪಿಎಸ್‌ಸಿ ಪರೀಕ್ಷೆಗಳಲ್ಲಿನ ಎಡವಟ್ಟಿಗೆ ಕಾರಣ ಎಂದು ಆರೋಪಿಸಿದರು.
PublicNext
30/12/2024 04:50 pm