ಧಾರವಾಡ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ ನಡೆಯಲಿದೆ. ಈ ಸಭೆಯಲ್ಲಿ ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಅನುಷ್ಠಾನಕ್ಕೆ ಗ್ರೀನ್ ಸಿಗ್ನಲ್ ಸಿಗುತ್ತಾ ಎಂದು ಕಾದು ನೋಡಬೇಕಿದೆ.
ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಮಾಡಬೇಕು ಎಂದು ಕಳೆದ 10 ವರ್ಷಗಳಿಂದ ಹೋರಾಟಗಳು ನಡೆಯುತ್ತಿವೆ. ಈ ಸಂಬಂಧ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ ಕೂಡ ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಮಾಡುವ ಸಂಬಂಧ ಸಾಧಕ, ಬಾಧಕಗಳ ಕುರಿತು ವರದಿ ನೀಡುವಂತೆ ಈ ಹಿಂದೆಯೇ ಸೂಚನೆ ನೀಡಿದ್ದರು. ಸರ್ಕಾರ ಕೂಡ ವರದಿ ನೀಡುವಂತೆ ಪಾಲಿಕೆ ಆಯುಕ್ತರಿಗೆ ಸೂಚನೆ ನೀಡಿತ್ತು.
ಹುಬ್ಬಳ್ಳಿ, ಧಾರವಾಡ ಅವಳಿನಗರ ಸೇರಿ ಒಟ್ಟು 14 ಲಕ್ಷಕ್ಕಿಂತಲೂ ಅಧಿಕ ಜನಸಂಖ್ಯೆ ಇದ್ದು, ಧಾರವಾಡದಲ್ಲೇ ಸುಮಾರು ಆರೂವರೆ ಲಕ್ಷಕ್ಕಿಂತ ಅಧಿಕ ಜನಸಂಖ್ಯೆ ಇದೆ. ಹೀಗಾಗಿ ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ಮಾಡುವಂತೆ ಹಿರಿಯ ನಾಗರಿಕರು, ಪಕ್ಷಾತೀತ ನಾಯಕರು ಸರ್ಕಾರಗಳಿಗೆ ಒತ್ತಾಯ ಮಾಡುತ್ತಲೇ ಬಂದಿದ್ದಾರೆ. ಈಗ ಈ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡ ನಂತರ ಶಾಸಕರಾದ ಅರವಿಂದ ಬೆಲ್ಲದ, ವಿನಯ್ ಕುಲಕರ್ಣಿ, ಸಚಿವ ಸಂತೋಷ ಲಾಡ್ ಕೂಡ ಸರ್ಕಾರದ ಗಮನಸೆಳೆದಿದ್ದರು. ಹೀಗಾಗಿ ಇಂದು ನಡೆಯುವ ಸಚಿವ ಸಂಪುಟದಲ್ಲಿ ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಮಾಡುವ ನಿರ್ಧಾರವನ್ನು ಸರ್ಕಾರ ಕೈಗೊಳ್ಳುತ್ತಾ ಕಾದು ನೋಡಬೇಕಿದೆ.
Kshetra Samachara
02/01/2025 01:39 pm