ಹಾಸನ: ರಾಜ್ಯದಲ್ಲಿ ನಡೆಯುತ್ತಿರುವ ಬಾಣಂತಿಯರ ಸರಣಿ ಸಾವು ಪ್ರಕರಣ ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಇಂದು ಪ್ರತಿಭಟನೆ ನಡೆಸಿದರು.
ಬಾಣಂತಿಯರ ಸಾವಿಗೆ ರಾಜ್ಯ ಸರ್ಕಾರದ ನಿರ್ಲಕ್ಷವೇ ಕಾರಣ ಎಂದು ಆರೋಪಿಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ನೇತ್ರಾವತಿ ಮಂಜುನಾಥ್ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಬಾಣಂತಿಯರ ಸಾವಿನ ಸಂಖ್ಯೆ ಹೆಚ್ಚಿದೆ. ಆರೋಗ್ಯ ಇಲಾಖೆ ಬಾಣಂತಿಯರ ಆರೋಗ್ಯ ರಕ್ಷಣೆ ಮಾಡುವಲ್ಲಿ ವಿಫಲವಾಗಿದೆ ಎಂದು ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.
ಮಹಿಳೆಯರ ಆರೋಗ್ಯ ರಕ್ಷಣೆ ಮಾಡಬೇಕಿರುವ ಸರ್ಕಾರ ಅವರ ಪಾಲಿಗೆ ಮಾರಕವಾಗಿದೆ. ಕೂಡಲೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಹಾಗೂ ಆರೋಗ್ಯ ಇಲಾಖೆ ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ, ಮಹಿಳಾ ಮುಖಂಡರಾದ ಸುಷ್ಮಾ ಕಾಂತರಾಜ್, ವನಜಾಕ್ಷಿ, ಸಂಗೀತ, ಶೋಭಾ, ಲಕ್ಷ್ಮಿ, ಇಂದಿರಾ, ಇತರರು ಇದ್ದರು
Kshetra Samachara
02/01/2025 02:54 pm