ಚಿಕ್ಕಮಗಳೂರು: ಸಿ.ಟಿ.ರವಿ ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ನಡುವಿನ ಅಶ್ಲೀಲ ಪದ ಬಳಕೆ ಆರೋಪ ಸಂಬಂಧ ಸಿ.ಟಿ.ರವಿ ಬಂಧನವನ್ನು ಖಂಡಿಸಿ ಡಿಸೆಂಬರ್ 19 ಹಾಗೂ 20 ರಂದು ಪ್ರತಿಭಟನೆ ನಡೆಸಿದ್ದ ಬಿಜೆಪಿ ಕಾರ್ಯಕರ್ತರಿಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡಿದ್ದಾರೆ.
ಡಿಸೆಂಬರ್ 19 ರಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಿ.ಟಿ.ರವಿ ವಿರುದ್ಧ ನೀಡಿದ ದೂರಿನ ಮೇರೆಗೆ ಎಫ್ಐಆರ್ ದಾಖಲಿಸಿಕೊಂಡಿದ್ದ ಬೆಳಗಾವಿಯ ಹಿರೇಬಾಗೇವಾಡಿ ಪೊಲೀಸರು, ಸುವರ್ಣಸೌಧದಲ್ಲೇ ಸಿ.ಟಿ.ರವಿ ಅವರನ್ನು ಬಂಧಿಸಿದ್ದರು. ಸಿ.ಟಿ. ರವಿ ಬಂಧನವಾಗುತ್ತಿದ್ದಂತೆಯೇ ಚಿಕ್ಕಮಗಳೂರಿನ ಹನುಮಂತಪ್ಪ ವೃತ್ತದಲ್ಲಿ ರಸ್ತೆ ತಡೆ ಮಾಡುವ ಮೂಲಕ ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದ್ದರು.
ಅಲ್ಲದೇ ಡಿಸೆಂಬರ್ 20 ರಂದು ಚಿಕ್ಕಮಗಳೂರು ನಗರ ಬಂದ್‌ಗೆ ಕರೆ ನೀಡಿದ್ದರು. ಈ ವೇಳೆ ಪ್ರತಿಭಟನಾ ನಿರತ ಬಿಜೆಪಿ ಕಾರ್ಯಕರ್ತರು ಬಲವಂತವಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಿದ್ದ ಆರೋಪವೂ ಕೇಳಿ ಬಂದಿತ್ತು. ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ಹಲವರ ವಿರುದ್ಧ ಬಿಎನ್ಎಸ್ ಕಾಯ್ದೆ 126,189,190,285 ಅಡಿಯಲ್ಲಿ ಮೊಕದ್ದಮೆ ದಾಖಲಿಸಿದ್ದರು. ಇದೀಗ 30 ಬಿಜೆಪಿ ಕಾರ್ಯಕರ್ತರಿಗೆ ವಿಚಾರಣೆಗೆ ಹಾಜರಾಗುವಂತೆ ತರೀಕೆರೆ ಪೊಲೀಸರು ನೋಟಿಸ್ ನೀಡಿದ್ದಾರೆ.
PublicNext
04/01/2025 01:23 pm