ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೈಂದೂರು: ಗಂಗೊಳ್ಳಿ ಗ್ರಾಪಂ ಉಪಾಧ್ಯಕ್ಷ ತಬ್ರೇಜ್ ವಿರುದ್ಧ ಬಿಜೆಪಿ ಪ್ರತಿಭಟನೆ

ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರದ ಕುಂದಾಪುರ ತಾಲೂಕಿನ ಗಂಗೊಳ್ಳಿ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್ ಹಾಗೂ SDPI ಪಕ್ಷದ ಅಭ್ಯರ್ಥಿಗಳು ಅನೈತಿಕ ಮೈತ್ರಿಯಿಂದ ಅಧಿಕಾರದ ಚುಕ್ಕಾಣಿ ಹಿಡಿದಿದ್ದು, ನಿನ್ನೆಯ ದಿನ ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಅಧ್ಯಕ್ಷರಾಗಿ ಜಯಂತಿ ಖಾರ್ವಿ ಹಾಗೂ SDPI ಪಕ್ಷದಿಂದ ತಬ್ರೇಜ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಕೆಲವೇ ಕ್ಷಣದಲ್ಲಿ ಗಂಗೊಳ್ಳಿ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಮೌಲ್ವಿಯಿಂದ ಪ್ರಾರ್ಥನೆ ನಡೆಸಿರುವ ವಿರುದ್ಧ ಇಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ನೇತೃತ್ವದಲ್ಲಿ ಬಿಜೆಪಿ ಹಾಗೂ ಗಂಗೊಳ್ಳಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಪ್ರತಿಭಟನೆ ನಡೆಯಿತು.

ಈ ವೇಳೆ ಶಾಸಕ ಗುರುರಾಜ್ ಗಂಟಿಹೊಳೆ ಮಾತನಾಡಿ, ಗಂಗೊಳ್ಳಿ ಗ್ರಾಮ ಪಂಚಾಯತ್ ನಲ್ಲಿ ಕಳೆದ 30 ವರ್ಷಗಳಿಂದ ಬಿಜೆಪಿ ಅಧಿಕಾರದಲ್ಲಿತ್ತು. ಆದರೆ, ಕಳೆದ ಒಂದು ವರ್ಷದಿಂದ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಇತ್ತೀಚೆಗೆ ನಡೆದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ SDPI ಅನೈತಿಕ ಮೈತ್ರಿಯಿಂದ ಗಂಗೊಳ್ಳಿ ಭಾಗದಲ್ಲಿ ಅಸಂಖ್ಯಾತ ಹಿಂದೂ ಧರ್ಮದವರ ಭಾವನೆಗಳಿಗೆ ಧಕ್ಕೆ ತರುವ ಕೆಲಸ ಮಾಡುತ್ತಿದ್ದಾರೆ. ಇದನ್ನು ಎಂದೆಂದೂ ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರು ಸಹಿಸುವುದಿಲ್ಲ ಎಂದು ನೇರವಾಗಿ ಪ್ರತಿಭಟನೆಯ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ.

ಬಿಜೆಪಿ ಮಂಡಲ ಕ್ಷೇತ್ರಾಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಮಾತನಾಡಿ, ಗಂಗೊಳ್ಳಿ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಮೌಲ್ವಿಗಳನ್ನು ಕರೆಸಿ ನಮಾಜ್ ಮಾಡಿಸಿರುವ ಉಪಾಧ್ಯಕ್ಷ ತಬ್ರೇಜ್ ನನ್ನು ತಕ್ಷಣ ಸಂಬಂಧಪಟ್ಟವರು ರಾಜೀನಾಮೆ ಪಡೆಯಬೇಕೆಂದು ಒತ್ತಾಯಿಸಿದ್ದಾರೆ ಹಾಗೂ ಕಾಂಗ್ರೆಸ್ ಹಾಗೂ SDPI ಪಕ್ಷದ ವಿರುದ್ಧ ಹರಿಹಾಯ್ದ ಅವರು, ಮುಂದಿನ ದಿನದಲ್ಲಿ ಇಂತಹ ಘಟನೆ ಮರುಕಳಿಸಿದರೆ ದೊಡ್ಡ ಮಟ್ಟದ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.

ಬಿಜೆಪಿ ಹಾಗೂ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು, ಕಾಂಗ್ರೆಸ್ ಮತ್ತು SDPI ವಿರುದ್ಧ ಧಿಕ್ಕಾರ ಕೂಗಿದರು.

ಪ್ರತಿಭಟನೆ ಸ್ಥಳಕ್ಕೆ ಕುಂದಾಪುರ ತಹಶೀಲ್ದಾರ್ ಮಲ್ಲಿಕಾರ್ಜುನ ಹಾಗೂ ತಾಲೂಕು ಕಾರ್ಯ ನಿರ್ವಹಣಾಧಿಕಾರಿ ರವಿ ಕುಮಾರ್ ಹುಕ್ಕೇರಿ ಆಗಮಿಸಿ, ಪ್ರತಿಭಟನೆಕಾರರ ಮನವಿ ಸ್ವೀಕರಿಸಿದರು.

ಬೈಂದೂರು ಸರ್ಕಲ್ ಇನ್ಸ್ಪೆಕ್ಟರ್ ಸವಿತಾ ತೇಜ, ಗಂಗೊಳ್ಳಿ ಪೊಲೀಸ್ ಠಾಣಾಧಿಕಾರಿ ಹರೀಶ್ ಆರ್. ನಾಯ್ಕ ಹಾಗೂ ಸಿಬ್ಬಂದಿ, ಗಂಗೊಳ್ಳಿ ಗ್ರಾಮ ಪಂಚಾಯತ್ ಪಿಡಿಒ ಉಮಾ ಶಂಕರ್, ಆರ್ ಐ ರಾಘವೇಂದ್ರ ದೇವಾಡಿಗ ಹಾಗೂ ಬಿಜೆಪಿ ನಾಯಕರು, ಗಂಗೊಳ್ಳಿ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಹಾಜರಿದ್ದರು.

Edited By : Suman K
Kshetra Samachara

Kshetra Samachara

04/01/2025 03:22 pm

Cinque Terre

4.43 K

Cinque Terre

0