ಮಡಿಕೇರಿ : ಬೈಕ್‌ನಲ್ಲಿ ತೆರಳುತ್ತಿದ್ದ ಸಹೋದರರಿಬ್ಬರ ಮೇಲೆ ಕಾಡಾನೆ ದಾಳಿ ಮಾಡಿದ ಘಟನೆ ದಕ್ಷಿಣ ಕೊಡಗಿನ ಪೊನ್ನಂಪೇಟೆ ಬಳಿಯ ಹಳ್ಳಿಗಟ್ಟು ಗ್ರಾಮದಲ್ಲಿ ನಡೆದಿದೆ.
ಮೊಹಮ್ಮದ್ ಫೈಜನ್ ಹಾಗೂ ಅಬುರ್ ಉವೈಸ್ ಸಹೋದರರು ಕಾಡಾನೆ ದಾಳಿಯಿಂದ ಗಾಯಗೊಂಡಿದ್ದು, ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇಂದು ಬೆಳಗ್ಗಿನ ಜಾವ ಬೈಕ್‌ನಲ್ಲಿ ತೆರಳುತ್ತಿದ್ದ ಈ ಇಬ್ಬರ ಮೇಲೆ ಕಾಡಾನೆ ದಾಳಿ ಮಾಡಿದೆ. ಈ ಸಂದರ್ಭ ಸಹೋದರರು ಬಿದ್ದು ಗಂಭೀರ ಗಾಯಗಳಾಗಿದೆ. ಇಬ್ಬರಿಗೂ ಪ್ರಥಮ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು.
ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ ಆಸ್ಪತ್ರೆಗೆ ಭೇಟಿ ನೀಡಿ ಗಾಯಗೊಂಡವರಿಗೆ ಸಾಂತ್ವನ ಹೇಳಿ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ತೋಟಗಳಲ್ಲಿ ನೆಲೆ ನಿಂತು ನಿರಂತರ ಜೀವ ಮತ್ತು ಬೆಳೆ ಹಾನಿಗೆ ಕಾರಣವಾಗುತ್ತಿರುವ ಕಾಡಾನೆಗಳನ್ನು ಸ್ಥಳಾಂತರಿಸುವ ಪ್ರಯತ್ನ ಸರಕಾರದ ಮೂಲಕ ನಡೆಯುತ್ತಿದೆ ಎಂದರು.
ಕೊಡಗು, ಚಿಕ್ಕಮಗಳೂರು, ಹಾಸನ ವ್ಯಾಪ್ತಿಯಲ್ಲಿ ಉಪಟಳ ನೀಡುತ್ತಿರುವ ಕಾಡಾನೆಗಳನ್ನು ಗುರುತಿಸಿ ಅವುಗಳಿಗೆ ಪುನರ್ವಸತಿ ಒದಗಿಸಬೇಕಾಗಿದೆ. ಇದಕ್ಕೆ ಅಗತ್ಯ ಜಾಗವನ್ನು ಗುರುತಿಸುವ ನಿಟ್ಟಿನಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ಈಗಾಗಲೇ ಅರಣ್ಯ ಇಲಾಖಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು ಎರಡು ಮೂರು ವರ್ಷಗಳ ಕಾಲಾವಧಿ ಬೇಕಾಗಬಹುದೆಂದು ಸಂಕೇತ್ ತಿಳಿಸಿದರು.
PublicNext
04/01/2025 03:27 pm