ಬೆಂಗಳೂರು: ಪತ್ನಿ ವಿರುದ್ಧ ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣಾಗಿದ್ದ ಟೆಕ್ಕಿ ಅತುಲ್ ಸುಭಾಷ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಆತನ ಪತ್ನಿ ನಿಖಿತಾ ಸಿಂಘಾನಿಯಾ ಸೇರಿದಂತೆ ಮೂವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನ ನ್ಯಾಯಾಲಯ ಪುರಸ್ಕರಿಸಿದೆ.
ಜನವರಿ 4ರಂದೇ ಜಾಮೀನು ಅರ್ಜಿಯನ್ನ ಇತ್ಯರ್ಥಗೊಳಿಸಬೇಕು ಎಂದು ಹೈಕೋರ್ಟ್ ಸೂಚಿಸಿತ್ತು. ಇದಕ್ಕೂ ಮುನ್ನ ಜಾಮೀನು ಬಗ್ಗೆ ವಾದ-ಪ್ರತಿವಾದ ಆಲಿಸಿದ್ದ ಸಿಟಿಸಿವಿಲ್ ನ್ಯಾಯಾಲಯವು ಇಂದು ಮೂವರು ಆರೋಪಿತರಿಗೆ ಷರತ್ತುಬದ್ದ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.
ನಾಳೆ ಭಾನುವಾರ ರಜೆ ಹಿನ್ನೆಲೆಯಲ್ಲಿ ಸೋಮವಾರ ಪರಪ್ಪನ ಅಗ್ರಹಾರ ಜೈಲಿನಿಂದ ಆರೋಪಿಗಳು ಬಿಡುಗಡೆಯಾಗಲಿದ್ದಾರೆ.
ಮಾರತ್ ಹಳ್ಳಿ ಪೊಲೀಸರಿಂದ ಬಂಧಿತರಾಗಿದ್ದ ಅತುಲ್ ಪತ್ನಿ ನಿಖಿತಾ ಸಿಂಘಾನಿಯಾ, ಅತ್ತೆ ನಿಶಾ ಸಿಂಘಾನಿಯಾ ಹಾಗೂ ಬಾಮೈದ ಅನುರಾಗ್ ಸಿಂಘಾನಿಯ ಸಲ್ಲಿಸಿದ್ದ ಅರ್ಜಿಯನ್ನ ನ್ಯಾಯಾಲಯವು ವಿಚಾರಣೆ ನಡೆಸಿತ್ತು.
ಇದಕ್ಕೆ ಆಕ್ಷೇಪಿಸಿದ್ದ ಸರ್ಕಾರಿ ಪರ ಅಭಿಯೋಜಕರಾದ ಭಾಗಲಕ್ಷ್ಮೀ ಅವರು ಆರೋಪಿತರಿಗೆ ಜಾಮೀನು ನೀಡಬಾರದೆಂದು ತಕರಾರು ಅರ್ಜಿ ಸಲ್ಲಿಸಿ ಪ್ರಬಲವಾಗಿ ವಾದ ಮಂಡಿಸಿದ್ದರು.
ಪತ್ನಿ ಹಾಗೂ ಮನೆಯವರು ಕಿರುಕುಳ ನೀಡುತ್ತಿರುವುದಾಗಿ ಆರೋಪಿಸಿ ಸುದೀರ್ಘ ಡೆತ್ ನೋಟ್ ಬರೆದು ಡಿ.9ರಂದು ಮಾರತ್ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮುನೆಕೊಳಲಿನಲ್ಲಿದ್ದ ಮನೆಯಲ್ಲಿ ಅತುಲ್ ಸುಭಾಷ್ ಆತ್ಮಹತ್ಯೆಗೆ ಶರಣಾಗಿದ್ದರು. ಸಾವಿಗೂ ಮುನ್ನ ಮೊಬೈಲ್ ನಲ್ಲಿ ಮಾಡಿಕೊಂಡಿದ್ದ ವಿಡಿಯೋ ವೈರಲ್ ಆಗುತ್ತಿದ್ದಂತೆ ರಾಷ್ಟ್ರದೆಲ್ಲೆಡೆ ಚರ್ಚೆಗೆ ಕಾರಣವಾಗಿತ್ತು.
ಈ ಸಂಬಂಧ ಭಾರತೀಯ ನ್ಯಾಯ ಸಂಹಿತೆ 108ರ ಆತ್ಮಹತ್ಯೆ ಪ್ರಚೋದನೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಡಿ.20ರಂದು ನಿಖಿತಾಳನ್ನ ಹರಿಯಾಣದ ಗುರುಗ್ರಾಮ ಹಾಗೂ ತಾಯಿ ಹಾಗೂ ಸಹೋದರರನ್ನ ಉತ್ತರಪ್ರದೇಶದ ಪ್ರಯಾಗ್ ನ ಹೋಟೆಲ್ ವೊಂದರಲ್ಲಿ ಬಂಧಿಸಿದ್ದರು.
PublicNext
04/01/2025 07:30 pm