ಧಾರವಾಡ: ಈರುಳ್ಳಿ ಬೆಳೆದ ರೈತರು ಸಾಕಷ್ಟು ನಷ್ಟ ಅನುಭವಿಸಿದ್ದರೂ ಸರ್ಕಾರ ರೈತರ ನೆರವಿಗೆ ಬಂದಿಲ್ಲ. ಸದ್ಯ ಹಿಂಗಾರು ಹಂಗಾಮಿನ ಕಡಲೆ ಬೆಳೆ ಅವಧಿಗೆ ಮುನ್ನವೇ ಒಣಗುತ್ತಿದ್ದು, ರೈತನನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ. ಕೂಡಲೇ ರಾಜ್ಯ ಸರ್ಕಾರ ರೈತರ ನೆರವಿಗೆ ಬರಬೇಕು ಎಂದು ಆಗ್ರಹಿಸಿ ನವಲಗುಂದ ತಾಲೂಕಿನ ಶಿರೂರು ಗ್ರಾಮದ ರೈತ ಮುಖಂಡ ಮಲ್ಲಿಕಾರ್ಜುನಗೌಡ ಬಾಳನಗೌಡರ ಅವರು ಧಾರವಾಡ ಜಿಲ್ಲಾಧಿಕಾರಿ ಕಚೇರಿಗೆ ಈರುಳ್ಳಿ ಹಾಗೂ ಕಡಲೆ ಬೆಳೆ ತಂದು ಪ್ರತಿಭಟನೆ ನಡೆಸಿದರು.
ಈರುಳ್ಳಿ ಬೆಳೆ ಈ ಹಿಂದೆ ಹೆಚ್ಚಿನ ಪ್ರಮಾಣದಲ್ಲಿ ಮಳೆಯಿಂದಾಗಿ ಹಾನಿಗೀಡಾಗಿದೆ. ಈರುಳ್ಳಿ ಬೆಳೆಗಾರರ ನೆರವಿಗೆ ಬರಬೇಕಿದ್ದ ಸರ್ಕಾರ ಇದುವರೆಗೂ ರೈತರಿಗೆ ನೆರವು ನೀಡಿಲ್ಲ. ಈಗ ಹಿಂಗಾರು ಹಂಗಾಮಿನ ಕಡಲೆ ಬೆಳೆ ಅವಧಿಗೆ ಮುನ್ನವೇ ಎಳೆಕಾಯಿಗಳೇ ಒಣಗುತ್ತಿವೆ. ಕೃಷಿ ಇಲಾಖೆ ಅಧಿಕಾರಿಗಳು ಇದನ್ನಾದರೂ ಗಮನಿಸಬೇಕಿತ್ತು. ಅಧಿಕಾರಿಗಳು ರೈತರ ನೆರವಿಗೆ ಬರುತ್ತಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರ ಕೂಡಲೇ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ಬೆಳೆ ವಿಮೆ, ಬೆಳೆ ಪರಿಹಾರವನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ರೈತರು ಒತ್ತಾಯಿಸಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
06/01/2025 04:54 pm