ಮಡಿಕೇರಿ: ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ವಾರ್ಷಿಕೋತ್ಸವ ಮತ್ತು ವಿದ್ಯಾರ್ಥಿ ಸಂಘದ ಸಮಾರೋಪ ಸಮಾರಂಭವು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಆರಂಭದಲ್ಲಿ ಮಾತನಾಡಿದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪಿ.ಆರ್.ವಿಜಯ್ ಅವರು ‘ವಿದ್ಯಾರ್ಥಿಗಳು ಸ್ನೇಹಿತರ ಮಾತು ಕೇಳದೆ, ಅಧ್ಯಾಪಕರು ಮತ್ತು ಪೋಷಕರ ಮಾತಿನಂತೆ ನಡೆದುಕೊಳ್ಳಬೇಕು. ಆ ನಿಟ್ಟಿನಲ್ಲಿ ಅಧ್ಯಯನದಲ್ಲಿ ತೊಡಗಿಸಿಕೊಳ್ಳುವಂತಾಗಬೇಕು’ ಎಂದು ಸಲಹೆ ನೀಡಿದರು.
ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಕೋರನ ಸರಸ್ವತಿ ಅವರು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಒಂದು ಪ್ರತಿಷ್ಠಿತ ವಿದ್ಯಾಸಂಸ್ಥೆಯಾಗಿದ್ದು, ಪ್ರತೀ ವರ್ಷವೂ ಉತ್ತಮ ಫಲಿತಾಂಶ ದಾಖಲಾಗುತ್ತಿದೆ. ಈ ಸಂಸ್ಥೆಯಲ್ಲಿ ಅಧ್ಯಯನ ಮಾಡಿ ಉನ್ನತ ಹುದ್ದೆಗೇರಿರುವ ಅನೇಕ ಹಿರಿಯ ವಿದ್ಯಾರ್ಥಿಗಳು ಇತಿಹಾಸವನ್ನೇ ನಿರ್ಮಾಣ ಮಾಡಿದ್ದಾರೆ.
ವಿದ್ಯಾರ್ಥಿಗಳು ತಮ್ಮ ಹೆಜ್ಜೆ ಗುರುತುಗಳನ್ನು ವಿದ್ಯಾಸಂಸ್ಥೆಯಲ್ಲಿ ಬಿಟ್ಟು ಹೋದರೆ ಅದು ಮುಂಬರುವ ವಿದ್ಯಾರ್ಥಿಗಳಿಗೆ ದಾರಿದೀಪವಾಗಲಿದೆ. ನಿರಂತರ ಅಧ್ಯಯನ ಮತ್ತು ಕಾರ್ಯ ತತ್ಪರತೆ ತಮ್ಮನ್ನು ಸಾಧಕರ ಸಾಲಿನಲ್ಲಿ ನಿಲ್ಲಿಸುತ್ತದೆ ಎಂದರು. ಶ್ರೀ ಕಾವೇರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಕೆ.ಜೆ.ದಿವಾಕರ ಅವರು 2019-20 ರಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಮಡಿಕೇರಿಯಲ್ಲಿ ನಿಯೋಜನೆ ಮೇರೆಗೆ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸಿದ ಅನುಭವ ಮತ್ತು ಆ ವರ್ಷದ ವಿದ್ಯಾರ್ಥಿಗಳ ಸಾಧನೆ ಮೆಲುಕು ಹಾಕಿದರು. ಇಲ್ಲಿ ಅಧ್ಯಯನ ಮಾಡುತ್ತಿರುವ ಅನೇಕ ವಿದ್ಯಾರ್ಥಿಗಳು ಆರ್ಥಿಕವಾಗಿ ಸದೃಢರಾಗಿ ಇರುವುದಿಲ್ಲ. ಆದರೆ ವಿದ್ಯಾರ್ಥಿಗಳು ಅವರ ತಂದೆ ತಾಯಿಗಳ ಕಷ್ಟವನ್ನು ಅರಿತು ತಾವು ಉತ್ತಮ ಅಂಕಗಳನ್ನು ಗಳಿಸಿ ಜೀವನ ನಿರ್ವಹಣೆಗೆ ಒಂದು ಉದ್ಯೋಗವನ್ನು ಪಡೆದಾಗ ಹೆತ್ತವರಿಗೆ ಕೊಡುವ ದೊಡ್ಡ ಬಹುಮಾನವಾಗಲಿದೆ ಎಂದರು.
Kshetra Samachara
06/01/2025 06:45 pm