ಬೆಂಗಳೂರು: ಇನ್ನು ಮುಂದೆ ಕಂದಾಯ ಜಮೀನಿನಲ್ಲಿ ಲೇಔಟ್ ನಿರ್ಮಾಣಕ್ಕೆ ಅವಕಾಶ ನೀಡಬಾರದು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ ಸಂಬಂಧಿಸಿದ ವಿಷಯಗಳ ಕುರಿತು ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿದ ಸಿಎಂ, ಕಂದಾಯ ಜಮೀನಿನಲ್ಲಿ ಲೇಔಟ್ ನಿರ್ಮಾಣಕ್ಕೆ ಅವಕಾಶ ನೀಡಬಾರದು. ಇದನ್ನು ತಡೆಯಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು. ಈಗಾಗಲೇ ಇರುವ ಅಂತಹ ಲೇಔಟ್‌ಗಳ ಕುರಿತು ಸೂಕ್ತ ಕ್ರಮ ಕೈಗೊಳ್ಳಬೇಕು. ನಿವೇಶನಗಳಲ್ಲಿರುವ ರಸ್ತೆಗಳನ್ನು ಸಾರ್ವಜನಿಕ ರಸ್ತೆಗಳಾಗಿ ಪರಿಗಣಿಸುವ ಕುರಿತು ಕ್ರಮ ಪರಿಶೀಲಿಸಬೇಕು. ಅಲ್ದೇ ನಗರ ಪ್ರದೇಶಗಳಲ್ಲಿ ಆಸ್ತಿಗಳ ಅಕ್ರಮ ನೋಂದಣಿ ತಡೆಗಟ್ಟಲು ಹಾಗೂ ಆಸ್ತಿ ನೋಂದಣಿ ಮತ್ತು ಖಾತಾ ನಮೂದನ್ನು ಇನ್ನಷ್ಟು ಸರಳೀಕರಣಗೊಳಿಸಲು ಕಾವೇರಿ ಮತ್ತು ಇ-ಆಸ್ತಿ ತಂತ್ರಾಂಶಗಳ ಸಂಯೋಜನೆಯನ್ನು ಕಡ್ಡಾಯಗೊಳಿಸಲಾಗಿದೆ ಈ ವರ್ಷ ಡಿಸೆಂಬರ್ ಕೊನೆಗೆ ರೂ.16,993 ಕೋಟಿ ರಾಜಸ್ವ ಸಂಗ್ರಹಿಸಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.17ರಷ್ಟು ಹೆಚ್ಚುವರಿ ಪ್ರಗತಿ ಸಾಧಿಸಲಾಗಿದೆ ಎಂದು ಅಧಿಕಾರಿಗಳು ಸಿಎಂಗೆ ಮಾಹಿತಿ ನೀಡಿದರು.
ಕಂದಾಯ ಇಲಾಖೆಯಲ್ಲಿ ಸರ್ವೇ ನಂಬರ್‌ಗಳಲ್ಲಿ ನಿರ್ಮಿಸಿದ ಅನಧಿಕೃತ ಬಡಾವಣೆಗಳು/ನಿವೇಶನಗಳ ದತ್ತಾಂಶ ಮಾಹಿತಿ ಇದ್ದು, ಸದರಿ ಮಾಹಿತಿಯನ್ನು ಆಧರಿಸಿ ಒಂದೇ ಯೋಜನೆಯಲ್ಲಿ ಸದರಿ ಸ್ವತ್ತುಗಳಿಗೆ ಖಾತಾ ದಾಖಲೆಗಳನ್ನು ನೀಡುವ ಪ್ರಕ್ರಿಯೆಗೆ ಚಾಲನೆ ನೀಡಬೇಕು ಎಂದು ಸೂಚಿಸಿದರು.
ಹಾಗೇ ಗ್ರಾಮ ಪಂಚಾಯತ್‌ಗಳಲ್ಲಿ 44 ಲಕ್ಷ ಆಸ್ತಿಗಳಿಗೆ ಮಾತ್ರ ಖಾತೆಯಿದೆ. ಇದರಿಂದ 800 ಕೋಟಿ ರೂ. ಆದಾಯ ಪ್ರತಿ ವರ್ಷ ಬರುತ್ತಿದೆ. ಆದರೆ ಸುಮಾರು 96 ಲಕ್ಷ ಆಸ್ತಿಗಳಿಗೆ ಇನ್ನೂ ಈ ಖಾತಾ ಇರುವುದಿಲ್ಲ. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಖಾತೆ ನೋಂದಣಿ ಪ್ರಕ್ರಿಯೆಯನ್ನು ಸರಳಗೊಳಿಸುವ ಕುರಿತು ಕ್ರಮ ಕೈಗೊಳ್ಳಿ ಎಂದು ಸಭೆಯಲ್ಲಿ ಸಿಎಂ ಸೂಚಿಸಿದರು.
PublicNext
06/01/2025 10:22 pm