ಬೆಂಗಳೂರು : ಬಿಬಿಎಂಪಿ, ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅಭಿಯಾನದ ಮಾದರಿಯಲ್ಲಿ ಖಾತಾ ನೀಡುವ ಪ್ರಕ್ರಿಯೆಯನ್ನು ನಡೆಸಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಫೆಬ್ರವರಿ 10ರ ಒಳಗಾಗಿ ನಿಗದಿತ ಅವಧಿಯಲ್ಲಿ ಖಾತಾ ನೀಡುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ ಸಂಬಂಧಿಸಿದ ವಿಷಯಗಳ ಕುರಿತು ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಸೂಚಿಸಿದ್ರು.
ಅಲ್ಲದೇ, ಬಿಬಿಎಂಪಿಯಲ್ಲಿ ಸುಮಾರು 15 ಲಕ್ಷ ಆಸ್ತಿಗಳು ಖಾತಾ ದಾಖಲೆಗಳನ್ನು ಹೊಂದಿರುವುದಿಲ್ಲ. ಇದರಿಂದ ತೆರಿಗೆಯೂ ಕಟ್ಟದ ಕಾರಣ ಸಾವಿರಾರು ಕೋಟಿ ರೂ. ತೆರಿಗೆ ಪ್ರತೀ ವರ್ಷ ಸರ್ಕಾರಕ್ಕೆ ನಷ್ಟ ಉಂಟಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸ್ಥಳೀಯ ಸಂಸ್ಥೆಗಳಲ್ಲಿ ಅಂದಾಜು 30 ಲಕ್ಷ ಆಸ್ತಿಗಳಿಗೆ ಖಾತೆಗಳು ಇರುವುದಿಲ್ಲ, ಗ್ರಾಮ ಪಂಚಾಯತ್‌ಗಳಲ್ಲಿ ಅಂದಾಜು 90 ಲಕ್ಷ ಆಸ್ತಿಗಳು ಖಾತಾ ದಾಖಲೆಗಳನ್ನು ಹೊಂದಿರುವುದಿಲ್ಲ. ಖಾತೆಯಿಲ್ಲದೆ, ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ ನೋಂದಣಿ ಮಾಡುವ ಪ್ರಕ್ರಿಯೆಗೆ ಕಡಿವಾಣ ಹಾಕಬೇಕು. ಇದು ಸ್ಥಳೀಯ ಸಂಸ್ಥೆಗಳು ಮತ್ತು ನೋಂದಣಿ ಇಲಾಖೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ತಾಕೀತು ಮಾಡಿದರು.
ಸ್ಥಳೀಯ ಸಂಸ್ಥೆಗಳು ಖಾತಾ ನೀಡಿರುವ ಆಸ್ತಿಗಳನ್ನು ಮಾತ್ರ ನೋಂದಣಿ ಇಲಾಖೆಯಡಿ ನೋಂದಣಿ ಮಾಡಬೇಕು. ಸ್ಥಳೀಯ ಸಂಸ್ಥೆಗಳು ನೀಡಿರುವ ಖಾತಾ ದಾಖಲೆಗಳ ಡಾಟಾಬೇಸ್ ಕಂಪ್ಯೂಟರ್‌ನಲ್ಲಿ ಇರಬೇಕು. ಈ ಡಾಟಾ ಬೇಸ್ ಆಧರಿಸಿ ನೋಂದಣಿ ಪ್ರಕ್ರಿಯೆ ಮಾಡಬೇಕು, ನೋಂದಣಿ ಪ್ರಕ್ರಿಯೆ ಇಂಟಿಗ್ರೇಷನ್ ಆದ ಮೇಲೆ ಅಕ್ರಮಗಳ ಮೇಲೆ ಕಡಿವಾಣ ಸಾಧ್ಯವಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಒನ್ ಟೈಮ್ ಪರಿಹಾರ ನೀಡುವ ಬಗ್ಗೆ ಮುಂದಿನ ಸಚಿವ ಸಂಪುಟದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು.
ಬಿಬಿಎಂಪಿಯಲ್ಲಿ ವ್ಯಾಪ್ತಿಯಲ್ಲಿ ಖಾತಾ ನೀಡಿರುವುದನ್ನು ಡಾಟಾ ಬೇಸ್‌ನಲ್ಲಿ ಹಾಕಬೇಕು. ಇದರಿಂದ ಖಾತೆ ಆದ ಆಸ್ತಿಗಳನ್ನು ಮಾತ್ರ ನೋಂದಣಿ ಮಾಡಬಹುದು. ಕಾಗದ ದಾಖಲೆಗಳ ಆಧಾರದಲ್ಲಿ ಯಾವುದೇ ಕಾರಣಕ್ಕೂ ನೋಂದಣಿಗೆ ಪರಿಗಣಿಸಬಾರದು ಎಂದು ಸೂಚಿಸದರು.
ಉಪ ನೋಂದಣಾಧಿಕಾರಿ ಕಚೇರಿಗಳಲ್ಲಿ ಕ್ರಮಬದ್ಧವಲ್ಲದ ಸ್ವತ್ತುಗಳ ನಕಲಿ ಖಾತೆಗಳನ್ನು ಸೃಜಿಸಿ ವಂಚನೆಯಿಂದ ಹೆಚ್ಚು ದಸ್ತಾವೇಜುಗಳ ನೋಂದಣಿ ಮಾಡುವ ಪ್ರಕ್ರಿಯೆಗೆ ಸಂಪೂರ್ಣ ಕಡಿವಾಣ ಹಾಕಬೇಕು ಎಂದು ಸಭೆಯಲ್ಲಿ ಸಿಎಂ ಸೂಚನೆ ನೀಡಿದರು.
PublicNext
06/01/2025 10:36 pm