ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರದುರ್ಗ: ಯುವನಿಧಿ ಯೋಜನೆ ಸದುಪಯೋಗಪಡಿಸಿಕೊಳ್ಳಿ - ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಆರ್.ಶಿವಣ್ಣ

ಚಿತ್ರದುರ್ಗ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಯುವನಿಧಿ ಯೋಜನೆಯು ಯುವ ಜನತೆಯ ಉಜ್ವಲ ಭವಿಷ್ಯಕ್ಕಾಗಿ ರೂಪಿಸಲಾಗಿದ್ದು,  ಆರ್ಥಿಕ ಸಂಕಷ್ಟದ ನಡುವೆ ಉದ್ಯೋಗದ ಹುಡುಕಾಟದಲ್ಲಿರುವ ನಿರುದ್ಯೋಗಿ ಯುವ ಜನರು, ಯುವನಿಧಿ ಯೋಜನೆಗೆ ನೋಂದಾಯಿಸಿಕೊಳ್ಳುವ ಮೂಲಕ ಸದುಪಯೋಗ ಪಡೆಯಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಆರ್.ಶಿವಣ್ಣ ಹೇಳಿದರು.

ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಬುಧವಾರ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಜಿಲ್ಲಾ, ತಾಲ್ಲೂಕು ಮಟ್ಟದ ಗ್ಯಾರಂಟಿ  ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಏರ್ಪಡಿಸಿದ ಯುವನಿಧಿ ವಿಶೇಷ ನೋಂದಣಿ  ಅಭಿಯಾನ ಹಾಗೂ ಪೋಸ್ಟರ್ ಬಿಡುಗಡೆ  ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವೃತ್ತಿಪರ ತರಬೇತಿ ಪಡೆದ ಡಿಪ್ಲೊಮಾ ವಿದ್ಯಾರ್ಥಿಗಳು ಹಾಗೂ ಪದವಿ ಶಿಕ್ಷಣ ಪಡೆದ ವಿದ್ಯಾರ್ಥಿಗಳಿಗೆ ಸ್ವಾವಲಂಬಿ ಜೀವನ ಕಲ್ಪಿಸಿಕೊಡುವ ನಿಟ್ಟಿನಲ್ಲಿ ರಾಜ್ಯಸರ್ಕಾರದ ಯುವನಿಧಿ ನೆರವಾಗಲಿದ್ದು, ಯುವನಿಧಿಯಡಿ ದೊರಕುವ ನಿರುದ್ಯೋಗ ಭತ್ಯೆಯನ್ನು ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಲು, ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧವಾಗಲು ಪುಸ್ತಕ ಖರೀದಿಗೆ  ಉಪಯೋಗವಾಗಲಿದೆ ಎಂದರು.

ಯುವ ಜನತೆಯ ಉಜ್ವಲ ಭವಿಷ್ಯಕ್ಕಾಗಿ ರಾಜ್ಯ ಸರ್ಕಾರವು ಯುವನಿಧಿ ಗ್ಯಾರಂಟಿ ಯೋಜನೆ ಅನುಷ್ಠಾನಗೊಳಿಸಿದ್ದು, ನಿರುದ್ಯೋಗಿ ಯುವ ಜನರಿಗೆ ಎರಡು ವರ್ಷಗಳವರೆಗೆ ಅಥವಾ ಫಲಾನುಭವಿಗಳಿಗೆ ಉದ್ಯೋಗ ಸಿಗುವವರೆಗೆ ನಿರುದ್ಯೋಗ ಭತ್ಯೆ ಒದಗಿಸಲಾಗುತ್ತದೆ. ಯುವನಿಧಿ ಯೋಜನೆಯು ನಿರುದ್ಯೋಗಿ ಪದವೀಧರರಿಗೆ ಪ್ರತಿ ತಿಂಗಳು ರೂ.3000/- ಹಾಗೂ ಡಿಪ್ಲೊಮಾ ಪದವೀಧರರಿಗೆ ಪ್ರತಿ ತಿಂಗಳು ರೂ.1500/- ಒದಗಿಸುವ ಅಭೂತಪೂರ್ವ ಯೋಜನೆ ಇದಾಗಿದೆ ಎಂದು ಹೇಳಿದರು.  

ಜಿಲ್ಲಾ ಉದ್ಯೋಗಾಧಿಕಾರಿ ಡಿ.ರವೀಂದ್ರ ಮಾತನಾಡಿ, ಕರ್ನಾಟಕ ರಾಜ್ಯದ ಮಹತ್ವಾಕಾಂಕ್ಷಿ ಯೋಜನೆಯಾದ “ಯುವನಿಧಿ” ಯೋಜನೆಯಲ್ಲಿ ಪದವಿ, ಸ್ನಾತಕೋತ್ತರ ಪದವಿ ಮತ್ತು ಡಿಪ್ಲೊಮಾ 2022-23ನೇ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡಿ 2023 ಮತ್ತು 2024ರಲ್ಲಿ ತೇರ್ಗಡೆಯಾಗಿ ಅರ್ಹತೆ ಹೊಂದಿದ ಅಭ್ಯರ್ಥಿಗಳು  ಹಾಗೂ ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿನಗಳನ್ನು ಪೂರೈಸಿದ ಅಭ್ಯರ್ಥಿಗಳಿಗೆ ಇದೇ ಜ.20 ರವರೆಗೆ “ಯುವನಿಧಿ” ವಿಶೇಷ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

Edited By : PublicNext Desk
Kshetra Samachara

Kshetra Samachara

08/01/2025 03:54 pm

Cinque Terre

200

Cinque Terre

0

ಸಂಬಂಧಿತ ಸುದ್ದಿ