ಮಡಿಕೇರಿ: ನಗರಸಭೆ ವ್ಯಾಪ್ತಿಯ ಕರ್ಣಂಗೇರಿ ಗ್ರಾಮ ಬಳಿಯ ಉಕ್ಕುಡದಲ್ಲಿ ಪೌರಕಾರ್ಮಿಕರಿಗೆ ಗೃಹಭಾಗ್ಯ ಯೋಜನೆಯಡಿ ಮನೆ ನಿರ್ಮಾಣಕ್ಕೆ ಶಾಸಕ ಡಾ.ಮಂತರ್ ಗೌಡ ಅವರು ಚಾಲನೆ ನೀಡಿದರು.
ಗೃಹಭಾಗ್ಯ ಯೋಜನೆಯಡಿ ತಲಾ 7.50 ಲಕ್ಷ ರೂ. ವೆಚ್ಚದಲ್ಲಿ 12 ಮನೆಗಳಿಗೆ ಸುಮಾರು 90 ಲಕ್ಷ ರೂ. ವೆಚ್ಚದಲ್ಲಿ ನೆಲಮಹಡಿ ಸೇರಿ ಮೂರು ಅಂತಸ್ತಿನ ಹನ್ನೆರಡು ಮನೆಗಳನ್ನು ಒಳಗೊಂಡ ಪೌರಕಾರ್ಮಿಕರ ಗೃಹಭಾಗ್ಯ ಯೋಜನೆಗೆ ಶಾಸಕರಾದ ಮಂತರ್ ಗೌಡ ಅವರು ಭೂಮಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರಾದ ಮಂತರ್ ಗೌಡ ಅವರು ಸರ್ಕಾರ ಪೌರಕಾರ್ಮಿಕರಿಗೆ ಅಗತ್ಯ ಮೂಲಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಹೆಚ್ಚಿನ ಕಾಳಜಿ ವಹಿಸಿದೆ ಎಂದರು.
ಪೌರಕಾರ್ಮಿಕರು ಪ್ರತಿ ನಿತ್ಯ ನಗರ ಪಟ್ಟಣ ಪ್ರದೇಶದಲ್ಲಿ ಸ್ವಚ್ಛತೆಗೆ ದುಡಿಯುತ್ತಾರೆ. ಇವರಿಗೆ ಮೂಲಸೌಲಭ್ಯ ಕಲ್ಪಿಸುವುದು ಹೆಚ್ಚಿನ ಆದ್ಯತೆಯಾಗಿದೆ. ಆ ನಿಟ್ಟಿನಲ್ಲಿ ಶೀಘ್ರ ಮನೆ ನಿರ್ಮಾಣದ ಕಾಮಗಾರಿ ಆರಂಭಿಸಿ, ಪೂರ್ಣಗೊಳಿ¸ಬೇಕು ಎಂದು ಡಾ.ಮಂತರ್ ಗೌಡ ಅವರು ತಾಕೀತು ಮಾಡಿದರು.
ಸರ್ಕಾರ ಎಲ್ಲಾ ವರ್ಗದ ಜನರಿಗೆ ಕನಿಷ್ಠ ಮೂಲ ಸೌಲಭ್ಯ ಕಲ್ಪಿಸಲು ಪ್ರಯತ್ನಿಸಿದೆ. ಆ ನಿಟ್ಟಿನಲ್ಲಿ ಪೌರಕಾರ್ಮಿಕರಿಗೆ ಆದ್ಯತೆ ಮೇಲೆ ವಸತಿ ಹಾಗೂ ಇತರೆ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ ಎಂದರು.
ಉಕ್ಕುಡದಲ್ಲಿ ಅಂಬೇಡ್ಕರ್ ಭವನವನ್ನು ಸಹ ನಿರ್ಮಿಸಬೇಕಿದೆ. ಆ ನಿಟ್ಟಿನಲ್ಲಿ 2 ಎಕರೆ ಜಾಗವನ್ನು ಕಾಯ್ದಿರಿಸಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಪ್ರಯತ್ನಿಸಲಾಗುವುದು. ಸಮಾಜ ಕಲ್ಯಾಣ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ ಅವರನ್ನು ಭೇಟಿ ಮಾಡಿ ಹೆಚ್ಚಿನ ಅನುದಾನ ಬಿಡುಗಡೆಗೆ ಮನವಿ ಮಾಡಲಾಗುವುದು ಎಂದು ಇದೇ ಸಂದರ್ಭದಲ್ಲಿ ಶಾಸಕರು ತಿಳಿಸಿದರು.
Kshetra Samachara
08/01/2025 07:37 pm