ಮಡಿಕೇರಿ : ಸಾರ್ವಜನಿಕರ ಸಮಸ್ಯೆಗಳನ್ನು ಸಕಾಲದಲ್ಲಿ ಇತ್ಯರ್ಥಪಡಿಸಲು ಅಧಿಕಾರಿಗಳು ಶ್ರಮಿಸುವಂತೆ ಲೋಕಾಯುಕ್ತ ಪೊಲೀಸ್ ಉಪ ಅಧೀಕ್ಷಕ ಕೆ.ಸಿ.ಪ್ರಕಾಶ್ ಅವರು ಸೂಚಿಸಿದ್ದಾರೆ. ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ದೂರು ಅರ್ಜಿ ಸ್ವೀಕರಿಸಿ ಅವರು ಮಾತನಾಡಿದರು.
ಎಲ್ಲಾ ಕಚೇರಿಗಳಲ್ಲಿ ಲೋಕಾಯುಕ್ತ ಕಾಯ್ದೆಯ ಮಾಹಿತಿ ಫಲಕವನ್ನು ಕಡ್ಡಾಯವಾಗಿ ಅಳವಡಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು ಎಂದು ಸೂಚಿಸಿದರು. ಸರ್ಕಾರಿ ಅಧಿಕಾರಿಗಳು ಸಾರ್ವಜನಿಕ ಸೇವೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಉತ್ತರಾದಾಯಿತ್ವ ಹೊಂದಿರಬೇಕು ಎಂದು ಕಿವಿಮಾತು ಹೇಳಿದರು.
ಕಂದಾಯ, ಪಂಚಾಯತ್ ರಾಜ್, ಸ್ಥಳೀಯ ಸಂಸ್ಥೆಗಳು ಸೇರಿದಂತೆ ವಿವಿಧ ಇಲಾಖೆ ವ್ಯಾಪ್ತಿಯಲ್ಲಿ ಸಾರ್ವಜನಿಕರು ತಮ್ಮ ಕೆಲಸಕ್ಕಾಗಿ ಭೇಟಿ ನೀಡುತ್ತಾರೆ. ಆದ್ದರಿಂದ ಸಾರ್ವಜನಿಕರಿಗೆ ಸ್ಪಂದಿಸಿ ಕರ್ತವ್ಯ ನಿರ್ವಹಿಸುವುದು ಅಧಿಕಾರಿ ಮತ್ತು ಸಿಬ್ಬಂದಿಗಳ ಜವಾಬ್ದಾರಿಯಾಗಿದೆ ಎಂದು ಹೇಳಿದರು. ಸಾರ್ವಜನಿಕವಾಗಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕರ್ತವ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಿದಾಗ ಹಲವು ಸಮಸ್ಯೆಗಳನ್ನು ಇತ್ಯರ್ಥಪಡಿಸಬಹುದು ಎಂದು ಹೇಳಿದರು.
ವಿದ್ಯಾರ್ಥಿ ನಿಲಯಗಳಲ್ಲಿ ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡಬೇಕು. ಗುಣಮಟ್ಟದ ಆಹಾರ ವಿತರಿಸಬೇಕು. ಸುಭದ್ರತೆಯತ್ತ ಗಮನಹರಿಸಬೇಕು. ರಿಜಿಸ್ಟ್ರಾರ್ ನಿರ್ವಹಿಸಬೇಕು. ಕುಡಿಯಲು ಶುದ್ಧ ನೀರು ಮತ್ತು ಸ್ನಾನಕ್ಕೆ ಬಿಸಿನೀರು ವ್ಯವಸ್ಥೆ ಮಾಡಬೇಕು ಎಂದು ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು.
Kshetra Samachara
09/01/2025 08:02 am