ಶಿವಮೊಗ್ಗ : ಮಂಗನ ಕಾಯಿಲೆ(ಕೆಎಫ್‌ಡಿ) ಕುರಿತು ಎಲ್ಲ ಪಂಚಾಯತ್‌ಗಳಲ್ಲಿ ಅರಿವು ಮೂಡಿಸಬೇಕು, ಹಾಗೂ ಮಲೆನಾಡಿನ ಭಾಗದಲ್ಲಿ ಜನರು ಕಾಡಿಗೆ ಹೋಗುವ ವೇಳೆ ಉಣ್ಣೆಗಳಿಂದ ರಕ್ಷಣೆ ಪಡೆಯಲು ಅಗತ್ಯವಾದ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು.
ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಲಾಗಿದ್ದ ಆರೋಗ್ಯ ಇಲಾಖೆಯ ವಿವಿಧ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಪ್ರಸಕ್ತ ಸಾಲಿನಲ್ಲಿ ಕೆಎಫ್‌ಡಿ ಪ್ರಕರಣಗಳು ವರದಿಯಾಗಿಲ್ಲ, ಆದರೆ ರೋಗ ಲಕ್ಷಣಗಳಿದ್ದಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ. ಸಾಗರ, ಸೊರಬ, ತೀರ್ಥಹಳ್ಳಿ, ಹೊಸನಗರ ಈ ನಾಲ್ಕು ತಾಲ್ಲೂಕುಗಳಲ್ಲಿ ಇಲಾಖೆಯಿಂದ ಡೇಪಾ ತೈಲ ನೀಡಲಾಗಿದೆ. ಸಾರ್ವಜನಿಕರು ಕಾಡಿಗೆ ಹೋಗುವ ಮುನ್ನ ಇದನ್ನು ಕೈ ಕಾಲುಗಳಿಗೆ ಲೇಪಿಸಿಕೊಂಡು ಹೋಗಬೇಕು. ಹಾಗೂ ಪಶುಸಂಗೋಪನೆ ಇಲಾಖೆಯಿಂದ ಜಾನುವಾರುಗಳಿಗೆ ಉಣ್ಣೆಯಿಂದ ರಕ್ಷಿಸಿಕೊಳ್ಳಲು ಅಗತ್ಯವಾದ ಲಸಿಕೆಯನ್ನು ನೀಡಬೇಕು ಎಂದು ತಿಳಿಸಿದ ಅವರು ಎಲ್ಲ ಪಂಚಾಯ್ತಿಗಳಲ್ಲಿ ಕೆಎಫ್‌ಡಿ ಕುರಿತು ಪೋಸ್ಟರ್, ಮಾಹಿತಿ, ಶಿಕ್ಷಣದ ಮೂಲಕ ಅರಿವು ಮೂಡಿಸಬೇಕು ಎಂದರು.
Kshetra Samachara
09/01/2025 03:29 pm