ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಾಳೆ ಸಂಪುಟದಲ್ಲಿ ಜಾತಿ ಜನಗಣತಿ ಮಂಡನೆ - ಸಿಎಂ ಸಿದ್ದರಾಮಯ್ಯಗೆ 9 ಆತ್ಮಸಾಕ್ಷಿ ಪ್ರಶ್ನೆ ಕೇಳಿದ ಆರ್ ಆಶೋಕ್

ಬೆಂಗಳೂರು: ನಾಳೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ. ಸಂಪುಟ ಸಭೆಯಲ್ಲಿ ಜಾತಿ ಜನಗಣತಿ ವರದಿ ಮಂಡಿಸುವ ಸಾಧ್ಯತೆ ಇದೆ ಈ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಆರ್ ಅಶೋಕ್ ಟ್ವಿಟರ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ 9 ಆತ್ಮ ಸಾಕ್ಷಿ ಪ್ರಶ್ನೆಗಳನ್ನ ಕೇಳಿದ್ದಾರೆ.

1) ತಮಗೆ ನಿಜವಾಗಿಯೂ ಜಾತಿಗಣತಿಯ ಬಗ್ಗೆ ಬದ್ಧತೆ ಇದ್ದಿದ್ದರೆ, 2018ರಲ್ಲೇ ಕಾಂತರಾಜು ವರದಿಯನ್ನ ಏಕೆ ಸ್ವೀಕರಿಸಿ ಜಾರಿ ಮಾಡಲಿಲ್ಲ?

2) ಹತ್ತು ವರ್ಷಗಳ ಹಿಂದೆ ಕೈಗೊಂಡ ಜಾತಿ ಜನಗಣತಿ ವೈಜ್ಞಾನಿಕವಾಗಿ ನಡೆದಿಲ್ಲ, ಅನೇಕ ಜನರ ಮನೆಗಳಿಗೆ ಭೇಟಿಯೇ ನೀಡಿಲ್ಲ ಎಂಬ ದೂರುಗಳಿವೆ. ಹೀಗಿರುವಾಗ ಈ ವರದಿಯನ್ನ ಈಗ ಮುನ್ನೆಲೆಗೆ ತರುವ ತರಾತುರಿ ಏಕೆ?

3) ಈ ಅವೈಜ್ಞಾನಿಕ ಜಾತಿ ಜನಗಣತಿ ವರದಿ ಸ್ವೀಕರಿಸದಂತೆ ಒಕ್ಕಲಿಗರ ಸಂಘ ಮನವಿ ಸಲ್ಲಿಸಿದೆ. ಇದನ್ನ ಬೆಂಬಲಿಸಿ ಸ್ವತಃ ಮಾನ್ಯ ಉಪಮುಖ್ಯಮಂತ್ರಿಗಳು ಹಾಗು ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರೇ ಸಹಿ ಮಾಡಿದ್ದಾರೆ. ತಮ್ಮದೇ ಪಕ್ಷದ ಹಿರಿಯ ನಾಯಕರು, ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರಾದ ಶ್ರೀ ಶಾಮನೂರು ಶಿವಶಂಕರಪ್ಪನವರೂ ಸಹ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಅನೇಕ ಮಠಾಧೀಶರು, ಧಾರ್ಮಿಕ ಮುಖಂಡರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಿರುವಾಗ ಕಳೆದ 20 ತಿಂಗಳಿನಿಂದ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಒಂದು ಸರ್ವಸಮ್ಮತವಾದ ನಿಲುವಿಗೆ ಬರುವ ಬದಲು ಈಗ ದಿಢೀರನೆ ಏಕಾಏಕಿ ವರದಿಯನ್ನ ಸಂಪುಟ ಸಭೆಯಲ್ಲಿ ಚರ್ಚೆಗೆ ಎತ್ತಿಕೊಳ್ಳುತ್ತಿರುವುದು ಯಾವ ಕಾರಣಕ್ಕೆ?

5) ಡಿಸಿಎಂ ಡಿ.ಕೆ.ಶಿವಕುಮಾರ್ ಅವರೊಂದಿಗೆ ಆಗಿದೆ ಎನ್ನಲಾದ ಅಧಿಕಾರ ಹಂಚಿಕೆ ಒಪ್ಪಂದವನ್ನ ಹೇಗಾದರೂ ಮಾಡಿ ಮುಂದೂಡಲು, ಅಧಿಕಾರ ಹಂಚಿಕೆ ಒಪ್ಪಂದದಿಂದ ತಪ್ಪಿಸಿಕೊಳ್ಳಲು ಜಾತಿ ಜನಗಣತಿ ವರದಿಯನ್ನು ತಂತ್ರವಾಗಿ ಬಳಸಿಕೊಳ್ಳಲಾಗುತ್ತಿದೆಯೇ?

6) ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಮೂಡಾ ಹಗರಣ, ಅಬಕಾರಿ ಇಲಾಖೆ ಹಗರಣ, ಕಂಟ್ರಾಕ್ಟರ್ ಗಳ ಕಮಿಷನ್ ಆರೋಪ, ಪ್ರಮನಿಯಲ್ ಅಧಿಕಾರಿಗಳು, ಗುತ್ತಿಗೆದಾರರ ಸರಣಿ ಆತ್ಮಹತ್ಯೆ ಈ ರೀತಿ ಸಾಲು ಸಾಲು ವಿವಾದಗಳು, ಕಳಂಕಗಳ ಸುಳಿಯಲ್ಲಿ ಮುಜುಗರ ಅನುಭವಿಸುತ್ತಿರುವ ಪರಿಸ್ಥಿತಿಯಿಂದ ಜನರ ಗಮನ ಬೇರೆಡೆ ಸೆಳೆಯಲು ಜಾತಿಗಣತಿ ವರದಿಯನ್ನ ಒಂದು ದಾಳವಾಗಿ ಬಳಸಲಾಗುತ್ತಿದೆಯೇ?

7) ದೆಹಲಿ ವಿಧಾನಸಭೆ ಚುನಾವಣೆಯ ಪ್ರಚಾರದಲ್ಲಿ ಬಳಸಿಕೊಳ್ಳಲು ಜಾತಿ ಗಣತಿ ವರದಿಯನ್ನು ಮುನ್ನೆಲೆಗೆ ತರಲಾಗುತ್ತಿದೆಯೇ?

8) ಜಾತಿಗಣತಿಯನ್ನ ರಾಜಕೀಯ ದಾಳವಾಗಿ ಬಳಸುವುದು ದಲಿತರಿಗೆ, ಹಿಂದುಳಿದ ವರ್ಗಗಳಿಗೆ, ತಳ ಸಮುದಾಯಗಳಿಗೆ ಮಾಡುವ ಅಪಮಾನವಲ್ಲವೇ? ಸಾಮಾಜಿಕ ನ್ಯಾಯವೆಂಬ ಪವಿತ್ರ ಪರಿಕಲ್ಪನೆಯನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳುವುದು ಆತ್ಮವಂಚನೆಯಲ್ಲವೇ?

9) ಜಾತಿ ಜನಗಣತಿ ವರದಿಯ ದತ್ತಾಂಶಗಳು ಮಾಧ್ಯಮಗಳಲ್ಲಿ ಸೋರಿಕೆಯಾಗಲು ಕಾರಣವೇನು? ಇದು ಸರ್ಕಾರದ ಲೋಪವೋ ಅಥವಾ ಉದ್ದೇಶಪೂರ್ವಕವಾಗಿಯೇ ವರದಿಯ ಅಂಕಿ-ಅಂಶಗಳನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಲಾಗುತ್ತಿದೆಯೇ?

ಈ 9 'ಆತ್ಮಸಾಕ್ಷಿ' ಈ ಪ್ರಶೆಗಳನ್ನ ಆತ್ಮಾವಲೋಕನ ಮಾಡಿಕೊಂಡು ಕರ್ನಾಟಕದ ಜನತೆಗೆ ಉತ್ತರ ನೀಡಿ ಎಂದಿದ್ದಾರೆ.

Edited By : Vijay Kumar
PublicNext

PublicNext

15/01/2025 03:26 pm

Cinque Terre

43.36 K

Cinque Terre

1