ಬೆಂಗಳೂರು : ಕಳೆದ ಹಲವು ದಿನಗಳಿಂದ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಮಾಜಿ ಸಂಸದ ಹಾಗೂ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಂ.ಶ್ರೀನಿವಾಸ್ ಅವರು ನಿಧನರಾಗಿದ್ದಾರೆ.
ಮೃತರು ಪತ್ನಿ, ಪುತ್ರ ವೆಂಕಟೇಶ್, ಪುತ್ರಿಯರು, ಸಹೋದರ ಹಾಗೂ ಬೆಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಎಂ.ಕೃಷ್ಣಪ್ಪ ಸೇರಿದಂತೆ ಅಪಾರ ಸಂಖ್ಯೆಯ ಅಭಿಮಾನಿಗಳು, ಹಿತೈಷಿಗಳನ್ನು ಅಗಲಿದ್ದಾರೆ.
ಕಳೆದ ಹಲವು ದಿನಗಳಿಂದ ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ಶ್ರೀನಿವಾಸ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರೆಂದು ಕುಟುಂಬದ ಮೂಲಗಳು ತಿಳಿಸಿವೆ.
ಮೃತರ ಅಂತ್ಯಕ್ರಿಯೆ ಒಕ್ಕಲಿಗ ಸಂಪ್ರದಾಯದಂತೆ ನಾಳೆ ಉತ್ತರಹಳ್ಳಿಯಲ್ಲಿ ನಡೆಯಲಿದೆ. ನಾಳೆ ಬೆಳಗ್ಗೆಯಿಂದ ಮಧ್ಯಾಹ್ನ 3 ಗಂಟೆವರೆಗೆ ಉತ್ತರಹಳ್ಳಿ ಸರ್ಕಲ್‌ನಲ್ಲಿರುವ ಮೆಟ್ರೋ ಕ್ಯಾಶ್ ಆ್ಯಂಡ್ ಕ್ಯಾರಿ ಬಳಿ ಇರುವ ಆರ್ಎಂಎಸ್ ಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ.
ಮಾಜಿ ಸಂಸದ ಎಂ.ಶ್ರೀನಿವಾಸ್ ಅವರ ನಿಧನಕ್ಕೆ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಸಂತಾಪ ಸೂಚಿಸಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಎಂ.ಶ್ರೀನಿವಾಸ್ ಅವರ ನಿಧನಕ್ಕೆ ಶೋಕ ವ್ಯಕ್ತಪಡಿಸಿದ್ದಾರೆ.
PublicNext
16/01/2025 06:48 pm