ದಾವಣಗೆರೆ : ಸಂವಿಧಾನವೇ’ ನಮ್ಮ ರಾಷ್ಟ್ರದ ಸರ್ವೋಚ್ಚ ಕಾನೂನು, ಅದಕ್ಕೆ ಎಲ್ಲರೂ ಗೌರವಿಸಬೇಕು ಮತ್ತು ಅದರ ನಿಯಮಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ್ ಹೇಳಿದರು.
ಜಿಲ್ಲಾಡಳಿತದಿಂದ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾದ 76 ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಪಥಸಂಚಲನದಲ್ಲಿ ವಿವಿಧ ತುಕುಡಿಗಳಿಂದ ಗೌರವ ವಂದನೆ ಸ್ವೀಕರಿಸಿ ತಮ್ಮ ಸಂದೇಶದಲ್ಲಿ ಮಾತನಾಡಿದರು.
ಬುದ್ಧ, ಬಸವ, ಅಂಬೇಡ್ಕರ್ ಅವರ ಸದಾಶಯದಂತೆ ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬ ತತ್ವದಡಿ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳನ್ನು ದೊರಕಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರವು ಕಾರ್ಯನಿರ್ವಹಿಸುತ್ತಿದೆ. ಜಿಲ್ಲೆಯಲ್ಲಿ ಈ ಬಾರಿ ಮುಂಗಾರು ಮತ್ತು ಹಿಂಗಾರು ಹಂಗಾಮಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ.
ಜಿಲ್ಲೆಯ ಜೀವನಾಡಿ ಭದ್ರಾ ಜಲಾಶಯ ತುಂಬಿರುವುದರಿಂದ ರೈತಾಪಿ ವರ್ಗದಲ್ಲಿ ಹರ್ಷ ಮನೆಮಾಡಿದೆ. ರೈತರು ಬೇಸಿಗೆ ಬೆಳೆಯ ಸಿದ್ಧತೆಯಲ್ಲಿ ತೊಡಗಿದ್ದಾರೆ. ಇದು ಅತ್ಯಂತ ಸಂತೋಷದ ವಿಷಯವಾಗಿದೆ ಎಂದರು.
ಆಕರ್ಷಕ ಪಥ ಸಂಚಲನ: 29 ತಂಡಗಳು ತಮ್ಮ ಶಿಸ್ತಿನ ಮತ್ತು ಆಕರ್ಷಕ ಪಥ ಸಂಚಲನದಲ್ಲಿ ಪಾಲ್ಗೊಂಡಿದ್ದವು, ಪೊಲೀಸ್ ಅಧಿಕಾರಿ ಸೋಮಶೇಖರಪ್ಪ.ಹೆಚ್.ಬಿ ಅವರು ಪಥಸಂಚಲನದ ನೇತೃತ್ವ ವಹಿಸಿದ್ದರು.
Kshetra Samachara
26/01/2025 02:07 pm