ಶಿವಮೊಗ್ಗ : ಶೈಕ್ಷಣಿಕ ಕ್ಷೇತ್ರದಲ್ಲಿನ ಅನ್ಯಾಯ, ಅದಕ್ಷತೆ ಹಾಗೂ ಶಿಥಿಲತೆ ವಿರುದ್ಧ ಹೋರಾಟಗಳ ಜೊತೆ ಹಲವಾರು ರಚನಾತ್ಮಕ ಕಾರ್ಯಗಳನ್ನು ಹಮ್ಮಿಕೊಳ್ಳುತ್ತಾ ಬಂದಿರುವ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕರ್ನಾಟಕ ದಕ್ಷಿಣ ವಿಭಾಗದ 44ನೇ ಪ್ರಾಂತ ಸಮ್ಮೇಳನವನ್ನು ಜನವರಿ 31, ಫೆಬ್ರವರಿ 1 ಮತ್ತು 2ರಂದು ಇಲ್ಲಿಯ ಅಲ್ಲಮಪ್ರಭು ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಸಮ್ಮೇಳನ ಸ್ವಾಗತ ಸಮಿತಿಯ ಅಧ್ಯಕ್ಷ ಎಸ್.ಎಸ್.ನಾಗರಾಜ್ ತಿಳಿಸಿದ್ದಾರೆ.
ಇಂದು ಸಮ್ಮೇಳನ ಸ್ಥಳದಲ್ಲಿ ಗುದ್ದಲಿ ಪೂಜೆ ನೆರವೇರಿಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಾಗರಾಜ್, ಕಳೆದ 75 ವರ್ಷಗಳಿಂದ ಅಭಾವಿಪ ರಾಷ್ಟ್ರದ ಪುನರ್ ನಿರ್ಮಾಣ, ಏಕತೆ ಮತ್ತು ಸಮಗ್ರತೆಗೆ ಶ್ರಮಿಸುತ್ತಿರುವ ಜಗತ್ತಿನ ಅತಿ ದೊಡ್ಡ ವಿದ್ಯಾರ್ಥಿ ಸಂಘಟನೆಯಾಗಿದೆ. ಶೈಕ್ಷಣಿಕ ಕ್ಷೇತ್ರದಲ್ಲಿ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸುತ್ತಿರುವ ಪ್ರಮುಖ ವಿದ್ಯಾರ್ಥಿ ಸಂಘಟನೆಯಾಗಿದೆ ಎಂದರು.
ಸಮ್ಮೇಳನದಲ್ಲಿ ಧ್ವಜಾರೋಹಣ, ಶೈಕ್ಷಣಿಕ ಮತ್ತು ಸಾಮಾಜಿಕ ವಿಷಯಗಳ ಕುರಿತು ನಿರ್ಣಯಗಳು, ಸಮಾನಾಂತರ ಗೋಷ್ಠಿಗಳು, ನಗರದ ಪ್ರಮುಖ ಬೀದಿಗಳಲ್ಲಿ ಶೋಭಾಯಾತ್ರೆ, ಸಾರ್ವಜನಿಕ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮ, ಯುವ ಸಾಧಕರೊಂದಿಗೆ ಸಂವಾದ, ಯುವ ಪುರಸ್ಕಾರ ಕಾರ್ಯಕ್ರಮಗಳು ಜರುಗಲಿವೆ ಎಂದು ತಿಳಿಸಿದರು.
ಈ ಸಮ್ಮೇಳನಕ್ಕೆ ದಕ್ಷಿಣ ಪ್ರಾಂತದ ಶಿವಮೊಗ್ಗ ಸೇರಿದಂತೆ ಉತ್ತರ ಕನ್ನಡ, ಉಡುಪಿ, ಮಂಗಳೂರು, ಕೊಡಗು, ದಾವಣಗೆರೆ, ಚಿಕ್ಕಮಗಳೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಕೋಲಾರ, ಹಾಸನ, ಮಂಡ್ಯ, ಚಾಮರಾಜನಗರ ಜಿಲ್ಲೆಗಳಿಂದ 1,200ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರು ಆಗಮಿಸಲಿದ್ದಾರೆ ಎಂದರು.
PublicNext
27/01/2025 08:53 pm