ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಜನರು ಕುಷ್ಟ ರೋಗಕ್ಕೆ ಭಯಪಡುವ ಅಗತ್ಯವಿಲ್ಲ

ಚಾಮರಾಜನಗರ : ಕುಷ್ಠರೋಗದ ಮುನ್ಸೂಚನೆ ಬಂದಲ್ಲಿ ಯಾವುದೇ ಭಯ ಪಡದೆ ಚಿಕಿತ್ಸೆ ಪಡೆದುಕೊಳ್ಳಿ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಅಲೀಂ ಪಾಷಾ ಸಲಹೆ ನೀಡಿದರು.

ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಗ್ರಾಮದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ತಾಲೂಕು ಆರೋಗ್ಯ ಇಲಾಖೆ ಸಹಯೋಗದಲ್ಲಿ  ಹಮ್ಮಿಕೊಂಡಿದ್ದ ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನ-2025 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕುಷ್ಠರೋಗದ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸುವ ಸಲುವಾಗಿ ಈ ಅಭಿಯಾನ ಆರಂಭಿಸಲಾಗಿದೆ ಎಂದು ತಿಳಿಸಿದರು.

ಪಾದಗಳ ದೌರ್ಬಲ್ಯ, ಬೆರಳುಗಳ ದೌರ್ಬಲ್ಯ, ಕಣ್ಣು ಮುಚ್ಚುವಲ್ಲಿ ತೊಂದರೆ ವ್ಯಕ್ತಿಯ ದೇಹದ ಮೇಲೆ ಸ್ಪರ್ಶ ಜ್ಞಾನವಿಲ್ಲದ ಮಚ್ಚೆಗಳು, ತ್ವಚೆಯ ಮೇಲೆ ಕೆಂಪಾದ ಬಾವು, ನೋವಿನಿಂದ ಕೂಡಿದ ಹಗ್ಗದ ಹಾಗೆ ಊದಿಕೊಂಡ ನರಗಳು, ವ್ಯಕ್ತಿಯ ದೇಹದ ಯಾವುದೇ ಭಾಗಗಳಲ್ಲಿ ತಿಳಿ ಬಿಳಿ ತಾಮ್ರದ ವರ್ಣದ ಸ್ಪರ್ಶ ಜ್ಞಾನವಿಲ್ಲದ ಮಚ್ಚೆಗಳು ಕುಷ್ಠ ರೋಗ ಕಾಯಿಲೆಯ ಲಕ್ಷಣಗಳಾಗಿದೆ. ಇದಕ್ಕೆ ಸಾರ್ವಜನಿಕರು ಭಯ ಪಡುವ ಅಗತ್ಯವಿಲ್ಲ. ಈ ಲಕ್ಷಣಗಳು ಕಂಡು ಬಂದಲ್ಲಿ ಸಮೀಪದ ಸರ್ಕಾರಿ ಆರೋಗ್ಯ ಕೇಂದ್ರಕ್ಕೆ ತೆರಳಿ ಪರೀಕ್ಷಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಸಾರ್ವಜನಿಕರಿಗೆ ಕುಷ್ಠರೋಗ ಗುಣಮುಖವಾಗುವುದಿಲ್ಲ ಎಂಬ ಮೂಡನಂಬಿಕೆ ಇದೆ. ಅದನ್ನು ಹೋಗಲಾಡಿಸಬೇಕು. ಇತರೆ ಖಾಯಿಲೆಗಳಂತೆ ಇದೂ ಸಹ ಸಾಮಾನ್ಯ ಖಾಯಿಲೆಗಳಂತೆ ಬಹುಔಷಧಿ ಚಿಕಿತ್ಸೆಯಿಂದ ಸಂಪೂರ್ಣವಾಗಿ ಗುಣಪಡಿಸಬಹುದಾಗಿದೆ. ಕುಷ್ಠರೋಗವನ್ನು ಪ್ರಾಥಮಿಕ ಹಂತದಲ್ಲೇ ಗುರುತಿಸಿ ವೈದ್ಯರಿಂದ ಚಿಕಿತ್ಸೆ ಪಡೆದರೆ ಗುಣಮುಖ ಮಾಡಿಕೊಳ್ಳಬಹುದು. ಜನರಲ್ಲಿ ಕುಷ್ಠರೋಗದ ಕುರಿತು ಇರುವ ಅವೈಜ್ಞಾನಿಕ ನಂಬಿಕೆಗಳನ್ನು ಹೋಗಲಾಡಿಸಿ, ಜನರಿಗೆ ಕುಷ್ಠರೋಗದ ಅರಿವು ಮೂಡಿಸುವುದು ಈ ಆಂದೋಲನದ ಮೂಲ ಉದ್ದೇಶ ಎಂದು ಹೇಳಿದರು.

Edited By : PublicNext Desk
Kshetra Samachara

Kshetra Samachara

02/02/2025 04:59 pm

Cinque Terre

1.4 K

Cinque Terre

0