ಬೆಂಗಳೂರು: ಇತ್ತೀಚಿಗೆ ರಾಜ್ಯದಲ್ಲಿ ಹೃದಯಾಘಾತ, ಹೃದಯಸ್ತಂಭನ, ಮೆದುಳು ಸಂಬಂಧಿ, ನರ ಸಂಬಂಧಿ ಮತ್ತಿತರ ಕಾರಣಗಳಿಂದಾಗಿ ಯುವ ಜನರು ಹಠಾತ್ ಸಾವಿಗೀಡಾಗುತ್ತಿರುವುದು ಹೆಚ್ಚಾಗಿ ಕಂಡು ಬರುತ್ತಿದೆ. ಈ ಕುರಿತಂತೆ ತಜ್ಞರ ಸಮಿತಿ ರಚಿಸಿ ವರದಿ ಸಲ್ಲಿಸಲು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಹಠಾತ್ ಸಾವಿಗೀಡಾಗುತ್ತಿರುವುದು ಕೋವಿಡ್ ಅಥವಾ ಕೋವಿಡ್ ಲಸಿಕೆಯ ಅಡ್ಡ ಪರಿಣಾಮಗಳ ಕಾರಣಕ್ಕೆ ಸಂಭವಿಸುತ್ತಿರಬಹುದೆಂದು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಆದ್ದರಿಂದ, ಕೋವಿಡ್ ಅಥವಾ ಕೋವಿಡ್ ಲಸಿಕೆಯ ಅಡ್ಡಪರಿಣಾಮಗಳಿಂದ ಹಠಾತ್ ಸಾವಿಗೀಡಾದವರ ಬಗ್ಗೆ ಅಧ್ಯಯನ ನಡೆಸಿ, ಇಂತಹ ಸಾವುಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಹಿರಿಯ ಪತ್ರಕರ್ತ ರಾಜಾರಾಂ ತಲ್ಲೂರು ಇ - ಮೇಲ್ ಮೂಲಕ ಸಿಎಂ ಸಿದ್ದರಾಮಯ್ಯ ಬಳಿ ಮನವಿ ಮಾಡಿದ್ದರು.
ರಾಜಾರಾಮ್ ಮನವಿಗೆ ಸ್ಪಂದಿಸಿರುವ ಸಿಎಂ, ಇಂತಹ ಹಠಾತ್ ಸಾವುಗಳ ಕುರಿತಂತೆ ಹಾಗೂ ಮುಂದೆ ಈ ರೀತಿಯ ಸಾವುಗಳು ಸಂಭವಿಸದಂತೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸಮರ್ಪಕ ಸಂಶೋಧನೆ ನಡೆಸಲು ಒಂದು ತಜ್ಞರ ಹಾಗೂ ವಿಜ್ಞಾನಿಗಳ ಸಮಿತಿಯನ್ನು ರಚಿಸಿ, ವರದಿ ಪಡೆದು, ಅಗತ್ಯ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ.
PublicNext
07/02/2025 05:08 pm